ಸಾಂದರ್ಭಿಕ ಚಿತ್ರ
ಪ್ರಜಾವಾಣಿ ಚಿತ್ರ
ಹುಬ್ಬಳ್ಳಿ: ‘ರೈತರಿಗೆ ಹಗಲು ಹೊತ್ತಿನಲ್ಲಿ ಏಳು ತಾಸು ನಿರಂತರ ತ್ರಿಫೇಸ್ ವಿದ್ಯುತ್ ನೀಡಲು 100ಕ್ಕೂ ಹೆಚ್ಚು ವಿದ್ಯುತ್ ವಿತರಣಾ ಉಪಕೇಂದ್ರಗಳನ್ನು ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿದ್ದು, ಈಗಾಗಲೇ ಎರಡು ಕಡೆ ಚಾಲನೆ ನೀಡಲಾಗಿದೆ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದ್ದು, ಉಪಕೇಂದ್ರಗಳ ಕೊರತೆಯಿಂದ ವಿದ್ಯುತ್ ಹಂಚಿಕೆ ಸರಿಯಾಗಿ ಆಗುತ್ತಿಲ್ಲ. ಉಪಕೇಂದ್ರ ಸ್ಥಾಪನೆಯಾದರೆ ಸಮಸ್ಯೆ ನಿವಾರಣೆಯಾಗಲಿದೆ ಎಂದರು.
‘ಕೃಷಿಗೆ 18 ಸಾವಿರದಿಂದ 19 ಸಾವಿರ ಮೆಗಾ ವಾಟ್ ವಿದ್ಯುತ್ ಅಗತ್ಯವಿದೆ. ಒತ್ತಡ ಹೆಚ್ಚಾಗುತ್ತಿರುವುದರಿಂದ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಿ, ಅವುಗಳಿಗೆ ಸೋಲಾರ್ ಅಳವಡಿಸಲಾಗುವುದು’ ಎಂದರು.
‘ಕುಸುಮ್ ‘ಬಿ’ ಅಡಿ ನೀರಾವರಿ ಪಂಪ್‌ಸೆಟ್ ಇರುವ ಕಡೆ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲಾಗುವುದು. ಉಪ ಕೇಂದ್ರಗಳ ಸಾಮರ್ಥ್ಯ ಆಧರಿಸಿ 3–4 ಎಕರೆ ಜಾಗವನ್ನು ಉಚಿತವಾಗಿ ನೀಡಲಾಗುವುದು. ಇದಕ್ಕಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ’ ಎಂದರು.
‘ಪ್ರಧಾನಿ ಮಂತ್ರಿ ಸೂರ್ಯ ಘರ್ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, 200 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಬಳಸುವವರಿಗೆ ಮಾತ್ರ ಆ ಯೋಜನೆಯಿಂದ ಅನುಕೂಲವಾಗಲಿದೆ. ಅದಕ್ಕಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಯೋಜನೆಯ ಅಗತ್ಯ ಇಲ್ಲ’ ಎಂದು ಹೇಳಿದರು.
‘ಮಳೆ ಕಾರಣ ಥರ್ಮಲ್ ವಿದ್ಯತ್ ಸ್ಥಾವರಗಳನ್ನು ಮುಚ್ಚಲಾಗಿತ್ತು. ಆಗ ಬೇರೆ ರಾಜ್ಯಗಳಿಂದ ವಿದ್ಯತ್ ಪಡೆಯಲಾಗಿತ್ತು. ಈಗ ನಮ್ಮಲ್ಲೇ ಹೆಚ್ಚು ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ವಿದ್ಯುತ್ ಕಡಿತ ಮಾಡುತ್ತಿಲ್ಲ’ ಎಂದು ಹೇಳಿದರು.
ಸ್ಮಾರ್ಟ್ ಮೀಟರ್‌ಗೆ ಸಂಬಂಧಿಸಿದಂತೆ ಬಿಜೆಪಿಯ ಕೆಲವು ಶಾಸಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯದ ತೀರ್ಪು ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕ ಎನ್.ಎಚ್. ಕೋನರೆಡ್ಡಿ, ಮಾಜಿ ಸಂಸದ ಐ.ಜಿ. ಸನದಿ, ಹೆಸ್ಕಾಂ ಅಧ್ಯಕ್ಷ ಸೈಯದ್‌ಅಜೀಂಪಿರ್ ಖಾದ್ರಿ, ಹುಡಾ ಅಧ್ಯಕ್ಷ ಶಾಕೀರ ಸನದಿ, ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ ಯಲಿಗಾರ, ಸದಾನಂದ ಡಂಗನವರ, ಸುವರ್ಣ ಕಲ್ಲಕುಂಟ್ಲಾ ಸೇರಿದಂತೆ ಅನೇಕರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.