ADVERTISEMENT

ಹುಬ್ಬಳ್ಳಿ: ಸುವರ್ಣ ವಿಧಾನಸೌಧ ಚಲೋ ನಾಳೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 7:55 IST
Last Updated 17 ಡಿಸೆಂಬರ್ 2025, 7:55 IST
   

ಹುಬ್ಬಳ್ಳಿ: ‘ಮಹದಾಯಿ, ಕಳಸಾ–ಬಂಡೂರಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 18ರಂದು ಬೆಳಗಾವಿ ಸುವರ್ಣ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕಿಶೋರ ಮಿಠಾರಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 10.30ಕ್ಕೆ ಸುವರ್ಣ ವಿಧಾನಸೌಧ ಎದುರಿನ 7ನೇ ಟೆಂಟ್‌ನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಸಾವಿರಾರು ರೈತರು ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಪ್ರತಿ ಬಾರಿ ಪ್ರತಿಭಟನೆ ನಡೆಸಿದಾಗ ಸಚಿವರು ಮನವಿ ಸ್ವೀಕರಿಸಿ, ಬಿಸಾಡುತ್ತಾರೆ. ಮುಂದಿನ ಬಾರಿ ಸುವರ್ಣ ವಿಧಾನಸೌಧದ ಒಳಗೆ ರೈತ ಮುಖಂಡರು ಪ್ರವೇಶಿಸಲು ಅವಕಾಶ ನೀಡಿ, ರೈತರ ಸಮಸ್ಯೆಗಳ ಕುರಿತು ಚರ್ಚಿಸಬೇಕು. ಇಲ್ಲದಿದ್ದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಘೇರಾವ್‌ ಹಾಕಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

‘ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ತಕ್ಷಣ ಬಿಡುಗಡೆ, ರೈತರ ಸಾಲ ಮನ್ನಾ, ರೈತರ ವಿರುದ್ಧದ ಪ್ರಕರಣ ಹಿಂಪಡೆಯುವುದು, ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದು, ಬೆಳೆಗೆ ಸೂಕ್ತ ಬೆಂಬಲ ಬೆಲೆ ಘೋಷಣೆ, ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತವಾಗಿ ವಿದ್ಯುತ್‌ ಪರಿವರ್ತಕ ಅಳವಡಿಕೆ, ರೈತ ದೌರ್ಜನ್ಯ ತಡೆ ಕಾಯ್ದೆ ಜಾರಿ, ನೀರಾವರಿ ಯೋಜನೆ ಅನುಷ್ಠಾನ, ಬಗರ್‌ಹುಕುಂ ಸಾಗುವಳಿ ಹಕ್ಕುಪತ್ರ ವಿತರಣೆ, ಹಗಲಿನಲ್ಲಿ 7 ತಾಸು ವಿದ್ಯುತ್‌ ಪೂರೈಕೆಗೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಲಾಗುವುದು’ ಎಂದರು.

ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿದ್ಧರಾಜು ಕುಂದಗೋಳ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿರಾಜ ಕಂಬಳಿ, ರಾಜ್ಯ ಘಟಕದ ಉಪಾಧ್ಯಕ್ಷ ನಿಂಗಪ್ಪ ದಿವಟಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.