ADVERTISEMENT

‘ರೈತ ಜಾಗೃತಿ ಅಭಿಯಾನ ಶೀಘ್ರ’-ಶಂಕರ ಅಂಬಲಿ

ಕೃಷಿ ಕಾಯ್ದೆ ತಿದ್ದುಪಡಿ, ವಿದ್ಯುತ್‌ ಕ್ಷೇತ್ರದ ಖಾಸಗೀಕರಣಕ್ಕೆ ವಿರೊಧ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 16:30 IST
Last Updated 13 ಆಗಸ್ಟ್ 2021, 16:30 IST

ಹುಬ್ಬಳ್ಳಿ: ಕೇಂದ್ರ ಸರ್ಕಾರಗಳ ಮೂರು ಕೃಷಿ ಕಾಯ್ದೆಗಳ ತಿದ್ದುಪಡಿ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯ ಬಗ್ಗೆ ಜಿಲ್ಲೆಯ ರೈತರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ರೈತ ಮತ್ತು ಕಾರ್ಮಿಕರ ವೇದಿಕೆಯಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರೈತಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಅಂಬಲಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗುರುವಾರ ಧಾರವಾಡದಲ್ಲಿ ನಡೆದ ವಿವಿಧ ರೈತ ಸಂಘಟನೆಗಳು ಹಾಗೂ ಕಾರ್ಮಿಕರ ಮುಖಂಡರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಅಭಿಯಾನದ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ, ನಿರಂತರವಾಗಿ ಖರೀದಿ ಕೇಂದ್ರಗಳನ್ನು ತೆರೆಯುವುದು, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡುವುದು, ವಿಮೆ ಪರಿಹಾರದ ಮೊತ್ತ ತ್ವರಿತವಾಗಿ ಖಾತೆ ಜಮೆ ಮಾಡುವುದು ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ಕೈಬಿಡಬೇಕು ಎನ್ನುವುದು ಪ್ರಮುಖ ಬೇಡಿಕೆಗಳಾಗಿವೆ’ ಎಂದರು.

ADVERTISEMENT

‘ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಅಭಿಯಾನ ನಡೆಯಲಿದೆ. ಕೃಷಿ ಕಾಯ್ದೆಯ ಅಪಾಯಗಳ ಬಗ್ಗೆ ಸ್ಥಳೀಯರ ರೈತರಿಗೆ ಮಾಹಿತಿ ನೀಡಲಾಗುವುದು. ಅವರು ಗ್ರಾಮಗಳಲ್ಲಿ ಸಂಚರಿಸಿ ಉಳಿದವರಿಗೆ ತಿಳಿವಳಿಕೆ ನೀಡಲಿದ್ದಾರೆ’ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪಕ್ಷಾತೀತ ರೈತ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಬಿ.ಎಂ.ಹಣಸಿ, ‘ಪ್ರವಾಹ ಮತ್ತು ನಿರಂತರ ಮಳೆಯಿಂದ ರೈತರು ಪರದಾಡುತ್ತಿದ್ದಾರೆ. ಲಾಕ್‌ಡೌನ್‌ನಿಂದಲೂ ಸಂಕಷ್ಟ ಎದುರಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಚರ್ಚಿಸಿಯೇ ಅಭಿಯಾನ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ’ ಎಂದರು.

ರೈತ ಮುಖಂಡರಾದ ಎಸ್‌.ವಿ. ಬಳಿಗಾರ, ಎಚ್‌.ಕೆ.ನಾಗರಹಳ್ಳಿ, ಬಾಬಾಜಾನ್ ಮುಧೋಳ, ರಬ್ಬಾನಿ ಮೇಸ್ತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.