ADVERTISEMENT

ಹುಬ್ಬಳ್ಳಿಯಲ್ಲಿ ರೈತರ ಸಮಾವೇಶ ಆ.13ಕ್ಕೆ

ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬೆಂಬಲವಿಲ್ಲ: ಕುರುಬೂರ ಶಾಂತಕುಮಾರ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2018, 9:32 IST
Last Updated 28 ಜುಲೈ 2018, 9:32 IST

ಹುಬ್ಬಳ್ಳಿ: ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ಎಂ.ಎಸ್‌. ಸ್ವಾಮಿನಾಥನ್‌ ವರದಿ ಜಾರಿಗೆ ಆಗ್ರಹಿಸಿ ದೇಶದಾದ್ಯಂತ ಹಮ್ಮಿಕೊಂಡಿರುವ ‘ಕಿಸಾನ್‌ ಅಧಿಕಾರ ಯಾತ್ರೆ’ ಅಂಗವಾಗಿ ಹುಬ್ಬಳ್ಳಿಯಲ್ಲಿ ಆಗಸ್ಟ್‌ 13 ರಂದು ಮುಂಬೈ ಕರ್ನಾಟಕ ಭಾಗದ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ್ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾತ್ರೆ ಮೂಲಕ ರೈತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಜತೆಗೆ ಹೋರಾಟವನ್ನೂ ಸಂಘಟಿಸಲಾಗುತ್ತಿದೆ. ಧಾರವಾಡ, ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಯ ರೈತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ರೈತರ ಆತ್ಮಹತ್ಯೆ ಮುಂದುವರಿದಿದೆ. ಜತೆಗೆ ಬೆಲೆ ಕುಸಿತ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದರು.

ADVERTISEMENT

ಸಕ್ಕರೆ ನಿಯಂತ್ರಣ ಕಾಯ್ದೆ ಪ್ರಕಾರ 14 ದಿನಗಳಲ್ಲಿ ಬಿಲ್‌ ಪಾವತಿಸಬೇಕು. ಇನ್ನೂ ₹ 1,700 ಕೋಟಿ ಬಿಲ್‌ ಅನ್ನು ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿವೆ. ಹದಿನೈದು ದಿನಗಳಲ್ಲಿ ಬಿಲ್‌ ಪಾವತಿಸದಿದ್ದರೆ, ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಮಹದಾಯಿ ನದಿ ನೀರಿನ ಯೋಜನೆ ಜಾರಿಗೆ ತಾತ್ಸಾರ ಮಾಡುತ್ತಿದ್ದಾರೆ. ಕೂಡಲೇ ಯೋಜನೆ ಜಾರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕು. ಹಿಂದುಳಿದಿರುವ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ನಡೆಸುವ ಹೋರಾಟಕ್ಕೆ ಬೆಂಬಲವಿದೆ. ಆದರೆ, ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬೆಂಬಲವಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.