ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಗಣೇಶನ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಮನೆಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೊಳ್ಳುತ್ತಿದೆ.
ನಗರದ ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಣೇಶಮೂರ್ತಿ ಮೆರವಣಿಗೆ ಮೂರುಸಾವಿರ ಮಠದ ಆವರಣದಿಂದ ಆರಂಭವಾಗಿದೆ. ಶ್ರೀಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು. ಸಾವಿರಾರು ಭಕ್ತರು ಮೆರವಣಗೆಯಲ್ಲಿ ಪಾಲ್ಗೊಂಡಿದ್ದಾರೆ.
ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ ಮುಖಾಂತರ ರಾಯಣ್ಣ ವೃತ್ತಕ್ಕೆಮೆರವಣಿಗೆ ಬಂದು ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪಂಚವಾದ್ಯ, ಡೋಲು, ಜಾಂಝ್ ಮೇಳಗಳು ಪಾಲ್ಗೊಂಡಿವೆ.
ಭಾರತ ಮಾತೆಯ ಆಳೆತ್ತರದ ಭಾವಚಿತ್ರ, ಭಗವಧ್ವಜ, ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಬಿಜೆಪಿ, ಆರ್‌ಎಸ್ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿಎಚ್.ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಪಾಲ್ಗೊಂಡಿದ್ದಾರೆ.
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಡಿಸಿಪಿ ನೇತೃತ್ವ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, ಸಿಎಆರ್ ತುಕಡಿಗಳು ಪಾಲ್ಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.