ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಅಯ್ಯಪ್ಪಸ್ವಾಮಿ ಮಾಲಾಧಾರಿ ಮಂಗಳವಾರ ಮೃತಪಟ್ಟಿದ್ದಾರೆ. ದುರಂತದಲ್ಲಿ ಈವರೆಗೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದಾರೆ.
ಸಾಯಿನಗರದ ನಿವಾಸಿ, ಇಸ್ಕಾನ್ ದೇವಾಲಯದಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ಪ್ರಕಾಶ ಬಾರಕೇರ (42) ಮೃತರು. ಅವರ ಪುತ್ರ ವಿನಾಯಕ (12) ಚೇತರಿಸಿಕೊಳ್ಳುತ್ತಿದ್ದಾನೆ.
‘ಡಿಸೆಂಬರ್ 22ರಂದು ತಡರಾತ್ರಿ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಟ್ಟಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಒಂಬತ್ತು ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದರು. ವಿನಾಯಕ ಬಾರಕೇರ ಹೊರತುಪಡಿಸಿ ಉಳಿದ ಎಲ್ಲರಿಗೂ ಶೇ 80 ರಷ್ಟು ಸುಟ್ಟಗಾಯಗಳಾಗಿದ್ದವು. ಧಾರವಾಡದ ಎಸ್‌ಡಿಎಂ ಹಾಗೂ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ವಿಭಾಗದ ವೈದ್ಯರು ಗಾಯಾಳುಗಳನ್ನು ಪರೀಕ್ಷಿಸಿ, ಚಿಕಿತ್ಸೆ ಕುರಿತು ಚರ್ಚಿಸಿದ್ದರು. ಎಲ್ಲ ಬಗೆಯ ಚಿಕಿತ್ಸೆ ನೀಡಿದ್ದರೂ ಗಾಯಾಳುಗಳನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ’ ಎಂದು ಆಸ್ಪತ್ರೆ ನಿರ್ದೇಶಕ ಎಸ್.ಎಫ್. ಕಮ್ಮಾರ್ ತಿಳಿಸಿದ್ದಾರೆ.
ಮೃತ ಕುಟುಂಬದವರಿಗೆ ಸರ್ಕಾರ ತಲಾ ₹5 ಲಕ್ಷ ಪರಿಹಾರ ಘೋಷಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ತಮ್ಮ ಫೌಂಡೇಷನ್ ವತಿಯಿಂದ ತಲಾ ₹50 ಸಾವಿರ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.