ADVERTISEMENT

ರಸ್ತೆ ದುರಸ್ತಿ, ನೀರು ಪೂರೈಕೆಗೆ ಆದ್ಯತೆ ನೀಡಿ

ಕುಂದಗೋಳ ತಾ.ಪಂ. ತ್ರೈಮಾಸಿಕ ಕೆಡಿಪಿ ಸಭೆ; ಶಾಸಕಿ ಕುಸುಮಾವತಿ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 16:22 IST
Last Updated 24 ಆಗಸ್ಟ್ 2022, 16:22 IST
ಹುಬ್ಬಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕುಂದಗೋಳ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಜಿ.ಎಂ.ಕಂದಕೂರ ಇದ್ದಾರೆ
ಹುಬ್ಬಳ್ಳಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕುಂದಗೋಳ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಜಿ.ಎಂ.ಕಂದಕೂರ ಇದ್ದಾರೆ   

ಹುಬ್ಬಳ್ಳಿ: ‘ಮಳೆಯಿಂದ ಹಾನಿಯಾದ ರಸ್ತೆಗಳನ್ನು ಶೀಘ್ರ ದುರಸ್ತಿ ಮಾಡಬೇಕು. ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು’ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕುಂದಗೋಳ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಜಿಲ್ಲಾ ಮುಖ್ಯರಸ್ತೆ ಅಭಿವೃದ್ಧಿ ಯೋಜನೆ ಅಡಿ ಸಿ.ಸಿ ರಸ್ತೆ, ಡಾಂಬರ್‌ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕಿ, ಆದಷ್ಟು ಬೇಗ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಬೇಕು. ಅತಿವೃಷ್ಟಿಯಿಂದ ರಸ್ತೆಗಳು ಹಾಳಾಗಿದ್ದರೆ ಅವುಗಳ ದುರಸ್ತಿಗೆ ಆದ್ಯತೆ ಮೇಲೆ ಕೆಲಸ ಮಾಡಬೇಕು ಎಂದು ಹೇಳಿದರು.

ADVERTISEMENT

2016–17 ನೇ ಸಾಲಿನಲ್ಲಿ ಮಂಜೂರಾದ ಅಂಬೇಡ್ಕರ್ ಭವನ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕಿ, ಕೂಡಲೇ ಸಂಬಂಧಪಟ್ಟ ಪಿಡಿಒಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಜಾಗದ ಸಮಸ್ಯೆ ಇದ್ದರೆ ಪರಿಹರಿಸಿ ಆದಷ್ಟು ಬೇಗ ಕಾಮಗಾರಿ ಆರಂಭಿಸಬೇಕು. ಒಂದು ವಾರದಲ್ಲಿ ಈ ಬಗ್ಗೆ ಮಾಹಿತಿ ಒದಗಿಸಬೇಕು ಎಂದರು.

ಕೆಲವು ಕಡೆ ನಾಲೆಗಳು ಒಡೆದು ಹೊಲಗಳಿಗೆ ನೀರು ನುಗ್ಗುತ್ತಿದ್ದೆ. ಈ ಬಗ್ಗೆ ರೈತರಿಂದ ಸಾಕಷ್ಟು ದೂರುಗಳು ಬಂದಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನ ಹರಿಸಿ ನಾಲೆ ದುರಸ್ತಿ ಮಾಡಬೇಕು ಎಂದು ಹೇಳಿದರು.

‘ನೂಲ್ವಿ ಗ್ರಾಮದಲ್ಲಿ ಹೊಲಗಳಿಗೆ ಹೋಗಲು ಸಮರ್ಪಕ ರಸ್ತೆ ಇಲ್ಲ. ಇದರಿಂದ ರೈತರಿಗೆ ತೊಂದರೆ ಆಗುತ್ತಿದೆ. ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ನಾಲೆ ಇರುವ ಕಡೆ ಹೆಚ್ಚು ನಿಲ್ಲುತ್ತಿರುವುದರಿಂದ ಸೇತುವೆ ನಿರ್ಮಿಸಬೇಕು’ ಎಂದು ಗ್ರಾಮದ ಕಂಟೆಪ್ಪ ಹೊಳೆಮನೂರ ಮನವಿ ಮಾಡಿದರು.

‘ವಿದ್ಯುತ್ ಸಂಪರ್ಕ ಕಲ್ಪಿಸಲು ನಿರಾಕ್ಷೇಪಣಾ ಪತ್ರ, ಜಾಗದ ಹಕ್ಕು ಪತ್ರ ನೀಡುವಂತೆ ಹೆಸ್ಕಾಂ ಅಧಿಕಾರಿಗಳು ಹೇಳುತ್ತಿದ್ದಾರೆ. ವಿದ್ಯುತ್ ಸಂಪರ್ಕ ಇಲ್ಲದೆ ಸಮಸ್ಯೆಯಾಗುತ್ತಿದೆ ಎಂದು ಕೊಟಗೊಂಡಹುಣಸಿ ಗ್ರಾಮದ ಮಹಿಳೆಯರು ಹೇಳಿದರು. ‘ಈ ಬಗ್ಗೆ ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲಾಗುವುದು’ ಎಂದು ಶಾಸಕಿ ಭರವಸೆ ನಿಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿ ಆಗಿರುವ ಪ್ರಗತಿ ಬಗ್ಗೆ ಮಾಹಿತಿ ನೀಡಿದರು.

‘ಗ್ರಾಮಸಭೆಯಲ್ಲಿ ಪಾಲ್ಗೊಳ್ಳಿ’

‘ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮ ಸಭೆಯಲ್ಲಿ ಭಾಗವಹಿಸಬೇಕು. ಗ್ರಾಮಸ್ಥರ ಅಹವಾಲು ಆಲಿಸಿ, ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

‘ಕೆಲವು ಅಧಿಕಾರಿಗಳು ನಿರಂತರವಾಗಿ ಗ್ರಾಮಸಭೆಗೆ ಗೈರಾಗುತ್ತಿದ್ದಾರೆ. ಇದರಿಂದ ಗ್ರಾಮಸಭೆಗಳು ರದ್ದಾಗುತ್ತಿರುವುದು ಗಮನಕ್ಕೆ ಬಂದಿದೆ. ತುರ್ತು ಕೆಲಸ ಇದ್ದರೆ ಅಧೀನ ಅಧಿಕಾರಿಗಳನ್ನಾದರೂ ಸಭೆಗೆ ಕಳಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.