ADVERTISEMENT

ಹುಬ್ಬಳ್ಳಿ: 4 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹50 ಕೋಟಿ ಅನುದಾನ; ಸಿ.ಎಂ ಭರವಸೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 4:43 IST
Last Updated 1 ಆಗಸ್ಟ್ 2025, 4:43 IST
ಬೆಂಗಳೂರಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಸಚಿವ ಸಂತೋಷ ಲಾಡ್‌ ಹಾಗೂ ಶಾಸಕ ಎನ್‌.ಎಚ್‌.ಕೋನರಡ್ಡಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ಬೆಂಗಳೂರಿನಲ್ಲಿ ಬುಧವಾರ ನಡೆದ ಸಭೆಯಲ್ಲಿ ಸಚಿವ ಸಂತೋಷ ಲಾಡ್‌ ಹಾಗೂ ಶಾಸಕ ಎನ್‌.ಎಚ್‌.ಕೋನರಡ್ಡಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು   

ಹುಬ್ಬಳ್ಳಿ: ‘ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಹುಬ್ಬಳ್ಳಿ–ಧಾರವಾಡ ಪೂರ್ವ ಹಾಗೂ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹50 ಕೋಟಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ’ ಎಂದು ಶಾಸಕ ಎನ್‌.ಎಚ್‌.ಕೋನರಡ್ಡಿ ತಿಳಿಸಿದ್ದಾರೆ.

‘ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ನೇತೃತ್ವದಲ್ಲಿ ಬುಧವಾರ ಸಭೆ ನಡೆಯಿತು. ಜಿಲ್ಲೆಗೆ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು, ಸೂಪರ್‌ ಸ್ಪೆಷಾಲಿಟಿ ವೈದ್ಯಕೀಯ ಕಾಲೇಜು, ಹೆಚ್ಚು ವಿದ್ಯಾರ್ಥಿನಿಲಯಗಳ ಸ್ಥಾಪನೆ, ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ಹಾಗೂ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಯಿತು’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

‘ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ₹50 ಕೋಟಿ ಜೊತೆಗೆ ಇನ್ನಷ್ಟು ಅನುದಾನ ಬಿಡುಗಡೆ ಮಾಡಬೇಕೆಂಬ ಮನವಿಗೂ ಸ್ಪಂದಿಸಿದರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಜೀರ್‌ ಅಹ್ಮದ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್‌ ಪರ್ವೇಜ್‌, ಜಂಟಿ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಪ್ತ ಸಹಾಯಕ ವೆಂಕಟೇಶ ಇದ್ದರು’ ಎಂದು ಮಾಹಿತಿ ನೀಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.