ADVERTISEMENT

ಹಳೇಹುಬ್ಬಳ್ಳಿ ಗಲಭೆ ಪ್ರಕರಣ: ವಿಶ್ವ ಹಿಂದೂ ಪರಿಷತ್‌ನಿಂದ ಪ್ರತಿಭಟನೆ

ಬೀದಿಗಿಳಿದು ಹೋರಾಟ ಮಾಡಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 14:43 IST
Last Updated 23 ಅಕ್ಟೋಬರ್ 2024, 14:43 IST
ಹಳೇಹುಬ್ಬಳ್ಳಿ ಇಂಡಿಪಂಪ್‌ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಬುಧವಾರ ಪ್ರತಿಭಟನಾ ಧರಣಿ ನಡೆಸಿದರು –ಪ್ರಜಾವಾಣಿ ಚಿತ್ರ
ಹಳೇಹುಬ್ಬಳ್ಳಿ ಇಂಡಿಪಂಪ್‌ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಬುಧವಾರ ಪ್ರತಿಭಟನಾ ಧರಣಿ ನಡೆಸಿದರು –ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ಹಿಂಪಡೆದಿರುವುನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಹಳೇಹುಬ್ಬಳ್ಳಿ ಮುಖ್ಯ ರಸ್ತೆಯ ದಿಡ್ಡಿ ಹನುಮಂತ ದೇವರ ಗುಡಿಯಿಂದ ಇಂಡಿಪಂಪ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಇಂಡಿಪಂಪ್‌ ವೃತ್ತದಲ್ಲಿ ವಾಹನಗಳ ಸಂಚಾರ ತಡೆದು ಧರಣಿ ನಡೆಸಿದರು. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್ ಕಲಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು ಮಾತನಾಡಿದ ಪರಿಷತ್‌ನ ಧಾರವಾಡ ಜಿಲ್ಲಾ ಘಟಕದ ಸಂಚಾಲಕ ಸಂಜಯ ಬಡಸ್ಕರ್‌, ‘ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ಎನ್‌ಐಎ ನಡೆಸುತ್ತಿತ್ತು. ಹೀಗಿದ್ದಾಗ ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ರಾಜ್ಯ ಸರ್ಕಾರ ಪ್ರಕರಣ ಹಿಂಪಡೆಯಲು ಸಾಧ್ಯವಿಲ್ಲ. ಮುಖ್ಯಮಂತ್ರಿ, ಗೃಹ ಸಚಿವವರು ಮೂರ್ಖರಾಗಿದ್ದು, ಕನಿಷ್ಠ ಜ್ಞಾನವೂ ಇಲ್ಲದ ಹಾಗೆ ವರ್ತಿಸುತ್ತಿದ್ದಾರೆ. ಪ್ರಕರಣಕ್ಕೆ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೂರಕ ದಾಖಲೆಗಳನ್ನು ಸಂಗ್ರಹಿಸಿದ್ದು, ಕಾನೂನು ಹೋರಾಟ ನಡೆಸಲಾಗುವುದು’ ಎಂದರು.

ADVERTISEMENT

‘ಚುನಾವಣಾ ಪೂರ್ವ ಕಾಂಗ್ರೆಸ್‌, ತಾನು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದವರ ವಿರುದ್ಧ ದಾಖಲಾದ ಪ್ರಕರಣಗಳನ್ನು ವಾಪಸ್‌ ಪಡೆಯುವ ಭರವಸೆ ನೀಡಿತ್ತು. ಅದರಂತೆ ಮಾಡಿದೆ. ಪೊಲೀಸ್‌ ಠಾಣೆಯ ಮೇಲೆಯೇ ಕಲ್ಲು ತೂರಾಟ ನಡೆಸಿದವರನ್ನು ಅಮಾಯಕರು ಎಂದು ಬಿಂಬಿಸಲು ಹೊರಟು, ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುತ್ತಿದೆ. ಇದನ್ನೆಲ್ಲ ಗಮನಿಸಿದರೆ, ಗೃಹ ಸಚಿವರ ಡಿಎನ್‌ಎ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪರೀಕ್ಷೆ ನಡೆಸಬೇಕಾಗಿದೆ’ ಎಂದು ವ್ಯಂಗ್ಯವಾಡಿದರು.

‘2022 ರ ಎಪ್ರಿಲ್‌ನಲ್ಲಿ ನಡೆದ ಗಲಭೆಯಲ್ಲಿ 150ಕ್ಕೂ ಹೆಚ್ಚು ಮಂದಿಯನ್ನು ತಾಂತ್ರಿಕ ಸಾಕ್ಷ್ಯಾಧಾರಗಳಿಂದ ಬಂಧಿಸಿ, ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು. ಪ್ರಬಲ ಸಾಕ್ಷ್ಯಗಳು ಹಾಗೂ ಎನ್‌ಐಎ ತನಿಖೆ ನಡೆಸುತ್ತಿರುವುದರಿಂದ ಒಂದೂವರೆ ವರ್ಷ ಕಾರಾಗೃಹದಲ್ಲಿ ಇದ್ದರು. ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ ಗೌರವ ಇಲ್ಲದ ಸರ್ಕಾರ ಅವರು ಅಮಾಯಕರು ಎಂದು, ಪ್ರಕರಣ ಹಿಂಪಡೆಯುವ ನಿರ್ಧಾರ ಮಾಡಿದ್ದು ಖಂಡನೀಯ’ ಎಂದು ಪರಿಷತ್‌ನ ಮುಖಂಡ ರಘು ಯಳಕ್ಕನವರ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಜಯತೀರ್ಥ ಕಟ್ಟಿ, ಸುಭಾಷ ಡಂಕ, ಹನುಮಂತ ನಿರಂಜನ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಹೆಚ್ಚಿದ ಶೋಷಣೆ: ಅಣ್ವೇಕರ್‌

‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಹಿಂದೂಗಳ ಶೋಷಣೆ ನಡೆಯುತ್ತಿದೆ. ನಿತ್ಯ ಗೋವುಗಳ ಹತ್ಯೆ ಆಗುತ್ತಿದ್ದು ಹಿಂದೂಗಳ ಭಾವನೆಗೆ ಧಕ್ಕೆ ತರುವುದಿಲ್ಲವೇ? ಸರ್ಕಾರದ ಧೋರಣೆಯಿಂದ ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡಲಾಗದ ಸ್ಥಿತಿಯಲ್ಲಿ ಇದ್ದಾರೆ. ಮುಸ್ಲಿಂ ತುಷ್ಟೀಕರಣ ಎಲ್ಲೆ ಮೀರುತ್ತಿದ್ದು ಇದು ಹೀಗೆ ಮುಂದುವರೆದರೆ ರಾಜ್ಯದಾದ್ಯಂತ ಆಂದೋಲನ ನಡೆಸಿ ಕಾನೂನು ಕೈಗೆತ್ತಿಕೊಳ್ಳಬೇಕಾಗಬಹುದು’ ಎಂದು ಪರಿಷತ್‌ನ ಮುಖಂಡ ವಕೀಲ ಅಶೋಕ ಅಣ್ವೇಕರ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.