ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ದೇಶಪಾಂಡೆ ನಗರದ ಪಕ್ಷದ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು.
ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸಿಹಿ ತಿನ್ನಿಸಿದ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪರಸ್ಪರ ಬಣ್ಣ ಎರಚಾಡಿ ಪಕ್ಷದ ಪರ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಶೆಟ್ಟರ್, 'ಫಲಿತಾಂಶ ಅತಂತ್ರವಾಗಿದೆ. ಆದರೆ, ನಮ್ಮ ಪಕ್ಷದ ಅಭ್ಯರ್ಥಿಗಳೇ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದರಿಂದ, ಶಾಸಕರು, ಸಂಸದರ ಹೆಚ್ಚುವರಿ ಮತ ಪಡೆದು ಅಧಿಕಾರಕ್ಕೆ ಬರುತ್ತೇವೆ' ಎಂದರು.
'ಪಕ್ಷೇತರ ಹಾಗೂ ಬಂಡಾಯ ಅಭ್ಯರ್ಥಿಗಳಿಂದ ಮೂರು, ನಾಲ್ಕು ಕ್ಷೇತ್ರಗಳಲ್ಲಿ ಸೋಲುಂಟಾಗಿದೆ. ಅವರು ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ. ಪಕ್ಷದಿಂದ ಉಚ್ಚಾಟನೆಗೊಂಡು ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಪಕ್ಷ ನಿರ್ಧರಿಸುತ್ತದೆ' ಎಂದು ತಿಳಿಸಿದರು.
ಮುಖಂಡರಾದ ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ಚಂದ್ರಶೇಖರ ಗೋಕಾಕ, ವೀರೇಶ ಸಂಗಳದ, ಬಸವರಾಜ ಕುಂದಗೋಳಮಠ, ಲಿಂಗರಾಜ ಪಾಟೀಲ, ರವಿ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.