ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 370 ರೌಡಿಶೀಟರ್‌ಗಳನ್ನು ರೌಡಿ ಪಟ್ಟಿಯಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹು–ಧಾ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಮಿಷನರೇಟ್ ವ್ಯಾಪ್ತಿಯಲ್ಲಿ 1,800ಕ್ಕೂ ಹೆಚ್ಚು ರೌಡಿಶೀಟರ್‌ಗಳಿದ್ದರೆ, 1,500 ಪೊಲೀಸ್ ಸಿಬ್ಬಂದಿ ಇದ್ದಾರೆ. ಪೊಲೀಸರಿಗಿಂತ ರೌಡಿಶೀಟರ್‌ಗಳೇ ಹೆಚ್ಚಿದ್ದಾರೆ ಎಂದರು.
ವಯಸ್ಸಾದವರು, ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸುವುದನ್ನು ನಿಲ್ಲಿಸಿದವರು ಮತ್ತು ಮುಖ್ಯವಾಹಿನಿಗೆ ಬರಲು ಬಯಸಿದವರನ್ನು ಗುರುತಿಸಿ ರೌಡಶೀಟರ್ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ತಿಳಿಸಿದರು.
ಅಪರಾಧ ಚಟುವಟಿಕೆಯಲ್ಲಿ ತೊಡಗದಂತೆ ಮುಂಜಾಗ್ರತಾ ಕ್ರಮವಾಗಿ 700 ರೌಡಿಶೀಟರ್‌ಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ. ಇನ್ನೂ ಕೆಲವು ರೌಡಿಗಳ ಚಲನವಲನದ ಮೇಲೆ ಸಿಬ್ಬಂದಿ ನಿಗಾ ವಹಿಸಿದ್ದು, ಅಪರಾಧ ಕೃತ್ಯಗಳಲ್ಲಿ ತೊಡಗಿದರೆ ಅವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 18 ಜನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ 83 ಜನರನ್ನು ಈ ವರ್ಷ ಗಡೀಪಾರು ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಬಿದ್ದರೆ ಇನ್ನೂ ಕೆಲವರನ್ನು ಗಡೀಪಾರು ಮಾಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ವಿದ್ಯಾಗಿರಿ, ಕಸಬಾಪೇಟೆ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳ್ಳರ ತಂಡವನ್ನು ಬಂಧಿಸಲಾಗಿತ್ತು. ಆ ನಂತರ ಸರಗಳವು ಪ್ರಕರಣಗಳು ಕಡಿಮೆಯಾಗಿದ್ದವು. ಈಚೆಗೆ ವಿದ್ಯಾಗಿರಿ ಹಾಗೂ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಗಳವು ಪ್ರಕರಣ ನಡೆದಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.