
ಹುಬ್ಬಳ್ಳಿ: ‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಲು ರಾಜ್ಯ ಸರ್ಕಾರ ಈಚೆಗೆ ಸಚಿವ ಸಂಪುಟದಲ್ಲಿ ಅನುಮತಿ ನೀಡಿತ್ತು. ಆದರೆ, ಸದ್ಯಕ್ಕೆ ಪ್ರತ್ಯೇಕ ಪಾಲಿಕೆ ಅಗತ್ಯವಿಲ್ಲ. ಅಭಿವೃದ್ಧಿ ವಿಷಯದಲ್ಲಿ ಹುಬ್ಬಳ್ಳಿ–ಧಾರವಾಡ ಎರಡೂ ನಗರಗಳು ಒಂದಾಗಿರಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
‘10 ಲಕ್ಷ ಅಥವಾ ಅದಕ್ಕಿಂತ ಹೆಚ್ಚಿನ ಜನಸಂಖ್ಯೆಯುಳ್ಳ ನಗರಗಳ ಮೂಲಸೌಲಭ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಆದ್ಯತೆ ಜೊತೆಗೆ ಹೆಚ್ಚಿನ ಅನುದಾನ ನೀಡುತ್ತದೆ. 16ನೇ ಹಣಕಾಸು ಆಯೋಗದ ಯೋಜನೆಯ ಮೂಲಕವೂ ಹೆಚ್ಚಿನ ಅನುದಾನ ಸಿಗಲಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರಸಕ್ತ ದಿನಗಳಲ್ಲಿ ಹುಬ್ಬಳ್ಳಿ–ಧಾರವಾಡ ಪಾಲಿಕೆ ವಿಭಜನೆ ಅಗತ್ಯವಿಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
‘ಪ್ರತ್ಯೇಕ ಪಾಲಿಕೆ ಬೇಡವೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿ ಎರಡೂ ನಗರಗಳ ಶಾಸಕರು ಮತ್ತು ಹೋರಾಟಗಾರರಿಗೆ ಮನವರಿಗೆ ಮಾಡಲಾಗಿದೆ. ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಿ, ಸರ್ಕಾರಕ್ಕೆ ಕಳುಹಿಸುವ ಚಿಂತನೆಯೂ ಇದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.