
ಹುಬ್ಬಳ್ಳಿಯ ನೆಹರೂ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಮಾನತಾಡಿದರು.
ಹುಬ್ಬಳ್ಳಿ: ‘ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಶ ದಾಖಲಿಸುವ ಗುರಿ ಹೊಂದಲಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಮಕ್ಕಳಿಗೆ ಪೋಷಕರ ಪ್ರೋತ್ಸಾಹ ಸಹ ಅಗತ್ಯ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ನಗರದ ಘಂಟಿಕೇರಿಯ ಅಂಜುಮನ್ ಸಂಸ್ಥೆಯ ನೆಹರೂ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಬದಲಾವಣೆಯ ಶಿಕ್ಷಣ; ಭವಿಷ್ಯದ ನಿರ್ಮಾಣ’-ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಶಿಕ್ಷಣದ ಮೂಲಕ ಮಾತ್ರ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬಹುದು. ಪೋಷಕರು ತಮ್ಮ ಜವಾಬ್ದಾರಿ ಅರಿತು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು. ಫಲಿತಾಂಶ ವೃದ್ಧಿಗೆ ಆರು ತಿಂಗಳಿನಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲಾಡಳಿತಕ್ಕೆ ವಿವಿಧ ಸಂಘ-ಸಂಸ್ಥೆಗಳು ನೆರವು ನೀಡುತ್ತಿವೆ’ ಎಂದರು.
‘ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ 50ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗುತ್ತಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳು ಅನುತ್ತೀರ್ಣ ಆಗುತ್ತಿರುವುದು ಬೇಸರದ ಸಂಗತಿ. ಎಲ್ಲ ಮಕ್ಕಳು ಉತ್ತಮ ಅಂಕ ಪಡೆದು ಉತ್ತೀರ್ಣರಾಗಬೇಕು ಎಂಬುದು ನಮ್ಮ ಉದ್ದೇಶ’ ಎಂದು ಹೇಳಿದರು.
‘ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಅಪರಾಧ. ಅವರನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಬೇಕು. ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
‘ಇಂಗ್ಲಿಷ್ ಕಷ್ಟ ಎಂಬ ಭಾವನೆ ಬಿಡಬೇಕು. ಯಾವುದೇ ಭಾಷೆ ಕಲಿಯಬೇಕಾದರೆ ಆತ್ಮವಿಶ್ವಾಸ, ಪ್ರೀತಿ ಮತ್ತು ಆಸಕ್ತಿ ಇರಬೇಕು. ವಿದ್ಯಾರ್ಥಿಗಳು ಐಎಎಸ್, ಐಪಿಎಸ್ ಅಧಿಕಾರಿಗಳಾಗುವ ಗುರಿ ಹೊಂದಬೇಕು. ಯುಪಿಎಸ್‌ಸಿ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಆನ್‌ಲೈನ್‌ನಲ್ಲಿ ಸಾಕಷ್ಟು ಮಾಹಿತಿ ಸಿಗುತ್ತದೆ. ಯುಪಿಎಸ್‌ಸಿ ಸಂದರ್ಶನವನ್ನು ನಿಮ್ಮ ಆಯ್ಕೆಯ ಭಾಷೆಯಲ್ಲಿ ಎದುರಿಸಲು ಅವಕಾಶ ಇದೆ’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ‘ನಮ್ಮ ದೇಶದಲ್ಲಿ ಸಾಕಷ್ಟು ಭಾಷೆಗಳಿವೆ. ಮಾತೃಭಾಷೆ ಮತ್ತು ವ್ಯಾವಹಾರಿಕ ಭಾಷೆ ಕಲಿಯುವುದು ಮುಖ್ಯ. ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ ಸಾಧಿಸುವುದು ಅವಶ್ಯ’ ಎಂದರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ‘ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿಲ್ಲ. ಧಾರವಾಡ ಜಿಲ್ಲೆಯನ್ನು ರಾಜ್ಯದಲ್ಲಿ 10 ಸ್ಥಾನದೊಳಗೆ ತರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಮಕ್ಕಳು ಶಾಲೆ ಬಿಡದಂತೆ ಪೋಷಕರು ಕ್ರಮ ವಹಿಸಬೇಕು’ ಎಂದು ತಿಳಿಸಿರು.
ಮಾಜಿ ಸಚಿವ ಎ.ಎಂ.ಹಿಂಡಸಗೇರಿ ಮಾತನಾಡಿದರು. ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಪೂರ್ಣಿಮಾ, ಹುಬ್ಬಳ್ಳಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಫಡ್ನೇಶಿ, ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಮುಖಂಡರಾದ ಅಲ್ತಾಫ ಹಳ್ಳೂರ, ಬಸೀರ ಹಳ್ಳೂರ, ಇಸಾರ್ ಅಹ್ಮದ್ ಬಳ್ಳಾರಿ ಇದ್ದರು.
ಉರ್ದು ಪ್ರೌಢಶಾಲಾ ಮುಖ್ಯಶಿಕ್ಷಕರು ಭಾಗಿ
ಅಲ್ಪಸಂಖ್ಯಾತರ ಶೈಕ್ಷಣಿಕ ಬಲವರ್ಧನೆ ಕಾರ್ಯಾಗಾರ
ಮಕ್ಕಳು ಸರಿಯಾಗಿ ಶಾಲೆಗೆ ಹೋಗುವಂತೆ ಪೋಷಕರು ನೋಡಿಕೊಳ್ಳಬೇಕು. ಮಕ್ಕಳ ಸಮಸ್ಯೆಯನ್ನು ಜಿಲ್ಲಾಡಳಿತಕ್ಕೆ ತಿಳಿಸಿದರೆ ಪರಿಹರಿಸಲು ಕ್ರಮ ವಹಿಸಲಾಗುವುದುದಿವ್ಯಪ್ರಭು,ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.