ADVERTISEMENT

ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಪ್ರಸ್ತಾವನೆ: ಅರವಿಂದ ಶ್ರೀವಾಸ್ತವ

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 16:13 IST
Last Updated 24 ಜುಲೈ 2024, 16:13 IST

ಪ್ರಜಾವಾಣಿ ವಾರ್ತೆ

ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು ₹ 397 ಕೋಟಿ ವೆಚ್ಚದಲ್ಲಿ ಹಾಗೂ ಗೋವಾ ರಾಜ್ಯದ ವಾಸ್ಕೊ ರೈಲ್ವೆ ನಿಲ್ದಾಣವನ್ನು ₹ 87 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ತಿಳಿಸಿದರು.

ಇಲ್ಲಿನ ರೈಲ್‌ ಸೌಧದಲ್ಲಿ ಬುಧವಾರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇವೆರಡೂ ಯೋಜನೆಗಳಿಗೆ  ರೈಲ್ವೆ ಮಂಡಳಿಯಿಂದ ಒಪ್ಪಿಗೆ ಸಿಕ್ಕ ತಕ್ಷಣ ಕಾಮಗಾರಿ ಆರಂಭಿಸುತ್ತೇವೆ’ ಎಂದು ಹೇಳಿದರು.

ADVERTISEMENT

ನೈರುತ್ಯ ರೈಲ್ವೆಯಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ₹1,103 ಕೋಟಿ ವೆಚ್ಚದಲ್ಲಿ 46 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ ಮತ್ತು 5 ಪ್ರಮುಖ ನಿಲ್ದಾಣಗಳನ್ನು ಸಹ ಪುನರಾಭಿವೃದ್ಧಿ ಮಾಡಲಾಗುತ್ತಿದೆ ಎಂದು ವಿವರಣೆ ನೀಡಿದರು.

ಯಶವಂತಪುರ ನಿಲ್ದಾಣವನ್ನು ₹ 367 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಜುಲೈ 2025 ರೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು ₹  484 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಅಕ್ಟೋಬರ್ 2025 ರೊಳಗೆ ಯೋಜನೆಯನ್ನು ಪೂರ್ಣಗೊಳಿಸುವ ಗುರಿ ಇದೆ ಎಂದು ನುಡಿದರು.

ನೇಮಕಾತಿ:

ಲೋಕೊ  ಪೈಲಟ್‌, ಟಿಕೆಟ್‌ ಕಲೆಕ್ಟರ್‌, ಗಾರ್ಡ್‌, ಸುರಕ್ಷಾ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ. 588 ಲೋಕೊ ಪೈಲಟ್‌ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದ್ದು, ಸದ್ಯದಲ್ಲಿಯೇ ಅವರನ್ನು ನೇಮಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಕರ್ನಾಟಕದಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಒಟ್ಟು 59 ರೈಲ್ವೆ ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಈ ರೈಲ್ವೆ ನಿಲ್ದಾಣಗಳಲ್ಲಿ ವಿಶ್ವದರ್ಜೆಯ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದರು.  

2009-2014 ರ ಅವಧಿಯಲ್ಲಿ ರೈಲ್ವೆ ಮಾರ್ಗಗಳ ವಿದ್ಯುದ್ದೀಕರಣವು ವರ್ಷಕ್ಕೆ ಸರಾಸರಿ 18 ಕಿ.ಮೀ ಆಗಿತ್ತು. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ 2014-2024 ರ ಅವಧಿಯಲ್ಲಿ ಸರಾಸರಿ ವಿದ್ಯುದ್ದೀಕರಣವನ್ನು ವರ್ಷಕ್ಕೆ 317 ಕಿ.ಮೀ.ಗೆ ಗಮನಾರ್ಹವಾಗಿ ಹೆಚ್ಚಿಸಲಾಗಿದೆ. ಇದು ಕಳೆದ 10 ವರ್ಷಗಳಲ್ಲಿ 18 ಪಟ್ಟು ಹೆಚ್ಚಾಗಿದೆ. ಪ್ರಸ್ತುತ ಶೇ 88 ಮಾರ್ಗವು ವಿದ್ಯುದ್ದೀಕರಣಗೊಂಡಿದ್ದು ಮಾರ್ಚ್ 2025 ರ ವೇಳೆಗೆ ಶೇ 100 ವಿದ್ಯುದ್ದೀಕರಣದ ಗುರಿ ಇದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.