ಹುಬ್ಬಳ್ಳಿ: ‘ಪ್ರಧಾನಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಸೇರಿದಂತೆ ಯಾವುದೇ ಯೋಜನೆಯಡಿ ಬಿಜೆಪಿಯವರು ತಮ್ಮ ಅವಧಿಯಲ್ಲಿ ಒಂದೇ ಒಂದು ಮನೆ ನಿರ್ಮಿಸಿಕೊಟ್ಟಿದ್ದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದರು.
ಹುಬ್ಬಳ್ಳಿಯ ಮಂಟೂರ ರಸ್ತೆಯ ಹೊಸಯಲ್ಲಾಪುರದಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಿಎಂಎವೈ ಯೋಜನೆಯಡಿ ನಿರ್ಮಾಣವಾಗಿರುವ ಮನೆಗಳನ್ನು ಭಾನುವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 1.80 ಲಕ್ಷ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಅದರಲ್ಲಿ ಕಳೆದ ವರ್ಷ 36,789 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಈ ವರ್ಷ 42,345 ಮನೆಗಳನ್ನು ಹಂಚಿಕೆ ಮಾಡಲಾಗುವುದು’ ಎಂದರು.
‘ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸಾಧನೆ ಆಧರಿಸಿ ಮತ ಕೇಳಿದರೆ, ಬಿಜೆಪಿಯವರು ಹಿಂದೂ ಮುಸ್ಲಿಮರ ಹೆಸರಿನಲ್ಲಿ ಚುನಾವಣೆ ಎದುರಿಸುತ್ತಾರೆ. ಅವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ, ಅಧಿಕಾರ ಮಾತ್ರ ಬೇಕು. ಎಚ್.ಡಿ.ಕುಮಾರಸ್ವಾಮಿ ಒಂದು ಕಡೆ ಇರಲು ಸಾಧ್ಯವಿಲ್ಲ. ಹೀಗಾಗಿ ಬಿಜೆಪಿ, ಜೆಡಿಎಸ್ ಮೈತ್ರಿ ಹೆಚ್ಚು ದಿನ ಉಳಿಯುವುದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.