
ಹುಬ್ಬಳ್ಳಿ: ‘ಇನ್‍ಕಾಮೆಕ್ಸ್ ಮೇಳದಲ್ಲಿ ಕೃಷಿ ವಿಶ್ವವಿದ್ಯಾಲಯ, ಐಐಟಿ ಹಾಗೂ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಮಾಡಿದ ಆವಿಷ್ಕಾರಗಳು ಮತ್ತು ನವೋದ್ಯಮಗಳಿಗೆ ಹೆಚ್ಚಿನ ಮಹತ್ವ ನೀಡಬೇಕು’ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಎಸ್.ಬಿ. ಹೊಸಮನಿ ಸಲಹೆ ನೀಡಿದರು.
ನಗರದಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕೈಗಾರಿಕಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಕಿರಣ ಅಡವಿ ಮಾತನಾಡಿ, ‘ಉತ್ಪಾದನೆಗಳಿಗೆ ಅನುಗುಣವಾಗಿ ಮಳಿಗೆಗಳನ್ನು ವಿಂಗಡಿಸಿ, ನವೋದ್ಯಮಗಳಿಗೆ ಅವಕಾಶ ನೀಡಬೇಕು’ ಎಂದು ತಿಳಿಸಿದರು.
ಸಂಸ್ಥೆಯ ಉಪಾಧ್ಯಕ್ಷ ವೀರಣ್ಣ ಕಲ್ಲೂರ ಮಾತನಾಡಿ, ‘ಸರ್ಕಾರಿ, ಅರೆಸರ್ಕಾರಿ ಇಲಾಖೆಗಳನ್ನು ಸಂಪರ್ಕಿಸಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದಲ್ಲಿ ಹೆಚ್ಚು ಅರ್ಥಪೂರ್ಣವಾಗುವುದು’ ಎಂದು ಅಭಿಪ್ರಾಯಪಟ್ಟರು.
ಗೌರವ ಕಾರ್ಯದರ್ಶಿ ಉದಯ ರೇವಣಕರ ಮಾತನಾಡಿ, ‘ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹಾಗೂ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಆಹ್ವಾನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ’ ಎಂದರು.
ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಇನ್‍ಕಾಮೆಕ್ಸ್ ಕೈಗಾರಿಕಾ ವಸ್ತುಪ್ರದರ್ಶನದ ಮಹತ್ವ ವಿವರಿಸಿದರು. ಮಾಜಿ ಅಧ್ಯಕ್ಷ ವಿನಯ ಜೆ. ಜವಳಿ ಮಾತನಾಡಿದರು. ಗೌರವ ಕಾರ್ಯದರ್ಶಿ ಪ್ರಕಾಶ ಶೃಂಗೇರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.