ADVERTISEMENT

ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 13:44 IST
Last Updated 3 ಜುಲೈ 2020, 13:44 IST

ಹುಬ್ಬಳ್ಳಿ: ರಾಜ್ಯದ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ತ್ವರಿತವಾಗಿ ವೇತನ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಶಿವಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕುಮಾರ ಹಕಾರಿ ಆಗ್ರಹಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ರಾಜ್ಯದ 453 ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸಿರುವ 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೆ ಮಾರ್ಚ್‌ನಿಂದ ವೇತನ ಪಾವತಿಯಾಗಿಲ್ಲ. ಕುಟುಂಬ ನಿರ್ವಹಣೆಗೆ ನೌಕರಿಯಿಂದಲೇ ಬರುವ ವೇತನ ನೆಚ್ಚಿಕೊಂಡಿರುವ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಈ ಕುರಿತು ತುರ್ತು ನಿರ್ಧಾರ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕೊರೊನಾ ಸೋಂಕಿನ ಭೀತಿ ಇರುವ ಕಾರಣ ಶಾಲೆಗಳು ಕೂಡ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿ ಇಲ್ಲ. ಬಹಳಷ್ಟು ವಿದ್ಯಾಸಂಸ್ಥೆಗಳು ಬ್ಯಾಂಕ್‌ನಲ್ಲಿ ಲೋನ್‌ ಪಡೆದಿವೆ. ಆದ್ದರಿಂದ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ಆರ್ಥಿಕ ಪ್ಯಾಕೇಜ್‌ ಘೋಷಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಸೋಂಕಿನ ಆತಂಕದ ನಡುವೆಯೂ ಸರ್ಕಾರ ಎಸ್ಸೆಸ್ಸೆಲ್ಸಿಯ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಆನ್‌ಲೈನ್ ತರಗತಿಗಳನ್ನು ನಡೆಸುವುದಕ್ಕೆ ವಿರೋಧಿಸಿದರು.

ಸಂಘಟನೆಯ ಪದಾಧಿಕಾರಿಗಳಾದ ಎಚ್‌. ಬಸವರಾಜ, ವಿನಯ ಮಲ್ಲುಂದರ, ಉಮೇಶ ಬಾಂಡಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.