ಹುಬ್ಬಳ್ಳಿ: ‘ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಬೇಕು. ಗುಣಮಟ್ಟದ ಕಾಮಗಾರಿ ಆದ್ಯತೆಯಾಗಿರಲಿ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿ ತಾಲ್ಲೂಕಿನ ಕಟ್ನೂರು ಗ್ರಾಮ ಪಂಚಾಯಿತಿಯ ಮಾವನೂರು ಗ್ರಾಮ ಹಾಗೂ ಹಳ್ಯಾಳ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ‘ಬಹುಗ್ರಾಮ ಕುಡಿಯುವ ನೀರು ಸ್ಥಾವರದ ಜಾಕ್ವೆಲ್ ಸುತ್ತ ಕಳೆ ಹಾಗೂ ಹೊಲಸು ತುಂಬಿದ್ದು ತಕ್ಷಣ ಶುಚಿಗೊಳಿಸಬೇಕು. ಅದರ ಸುತ್ತ ತಡೆಗೋಡೆ ನಿರ್ಮಿಸಿ ಶುಚಿತ್ವ ಕಾಪಾಡಿಕೊಳ್ಳಬೇಕು’ ಎಂದು ಸೂಚಿಸಿದರು.
‘ಗ್ರಾಮಸ್ಥರಿಗೆ ಕೊಳವೆಬಾವಿ ನೀರು ಪೂರೈಸುವ ಬದಲು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಪೂರೈಕೆ ಮಾಡಬೇಕು. ತ್ವರಿತ ಗತಿಯಲ್ಲಿ ಜೆಜೆಎಂ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಪ್ರಮುಖವಾಗಿದ್ದು, ಯಾವುದೇ ಕಾರಣಕ್ಕೂ ಕಳಪೆ ಕಾಮಗಾರಿ ನಡೆಯಬಾರದು. ಪರಿಶೀಲನೆ ವೇಳೆ ಲೋಪ ಕಂಡುಬಂದರೆ ಗುತ್ತಿಗೆದಾರರ ಜೊತೆ, ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಸಿದರು.
‘ಬೋರ್‌ವೆಲ್ ನೀರಿನಲ್ಲಿ ಫ್ಲೋರೈಡ್ ಅಂಶಗಳು ಜಾಸ್ತಿ ಇರುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಲ್ಲು ಹಾಗೂ ಒಸಡುಗಳು ಬೇಗ ಹಾಳಾಗುತ್ತವೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಪಿಡಿಒಗಳಿಗೆ ನಿರ್ದೇಶಿಸಿದರು.
ಗ್ರಾಮದ ಮನೆ ಮನೆಗೆ ಭೇಟಿ ನೀಡುವ ಮೂಲಕ ಸಿಇಒ ಭುವನೇಶ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಪೂರೈಕೆಯಾಗುತ್ತಿರುವ ನೀರನ್ನು ಪರಿಶೀಲಿಸಿದರು. ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಸಿಬ್ಬಂದಿಯ ಇ-ಹಾಜರಾತಿಯನ್ನು ವೆಬ್ ತಂತ್ರಾಂಶದಲ್ಲಿ ಪರೀಕ್ಷಿಸಿದರು. ತಡವಾಗಿ ಹಾಜರಾತಿ ನಮೂದಿಸುತ್ತಿರುವ ಸಿಬ್ಬಂದಿಗೆ ನೋಟಿಸ್ ನೀಡಲು ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.
ಕಟ್ನೂರು, ಹಳ್ಯಾಳ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ, ಗ್ರಂಥಾಲಯ, ಶೌಚಾಲಯ, ಆಟದ ಮೈದಾನ, ಶಾಲಾ ಕಾಂಪೌಂಡ್, ಶಾಲಾ ಕೊಠಡಿಗಳನ್ನು ಪರಿಶೀಲಿಸಿದರು. ಮಕ್ಕಳಿಗೆ ಪರಿಸರ, ನೈರ್ಮಲ್ಯ ಕುರಿತು ಮಾಹಿತಿ ನೀಡಿ, ಒಂದೊಂದು ಗಿಡವನ್ನು ಮನೆಯ ಜಾಗದಲ್ಲಿ ನೆಡುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಜಗದೀಶ್, ತಾ.ಪಂ. ಇಒ ರಾಮಚಂದ್ರ ಹೊಸಮನಿ ಹಾಗೂ ಇತರರು ಪಾಲ್ಗೊಂಡಿದ್ದರು.
ತೆರಿಗೆ ಸಂಗ್ರಹ ಕುಂಠಿತ ಅಸಮಾಧಾನ
ಕಟ್ನೂರು ಮತ್ತು ಮಾವನೂರು ಗ್ರಾಮಗಳಲ್ಲಿನ ತೆರಿಗೆ ವಸೂಲಾತಿ ಪರಿಶೀಲಿಸಿದ ಸಿಇಒ ಭುವನೇಶ ತೆರಿಗೆ ಸಂಗ್ರಹ ಕುಂಠಿತವಾಗಿರುವುದನ್ನು ಗಮನಿಸಿದರು. ಅಸಮಾಧಾನ ವ್ಯಕ್ತಪಡಿಸಿ ಗ್ರಾಹಕರಿಗೆ ನೋಟಿಸ್ ನೀಡುವಂತೆ ಸೂಚಿಸಿದರು. ಗ್ರಾಮ ಪಂಚಾಯಿತಿಯ ಸುತ್ತಲು ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ರಸ್ತೆ ಚರಂಡಿಗಳನ್ನು ಶುಚಿಗೊಳಿಸಿ ನೈರ್ಮಲ್ಯ ಕಾಪಾಡಿಕೊಳ್ಳುವಂತೆ ಪಿಡಿಒಗೆ ನಿರ್ದೇಶಿಸಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ನೀಡುತ್ತಿರುವ ಆಹಾರ ಸೇವಿಸಿ ಗುಣಮಟ್ಟ ಪರೀಕ್ಷಿಸಿದರು. ಕಾಲಕಾಲಕ್ಕೆ ಮಕ್ಕಳ ತೂಕ ಎತ್ತರ ಆರೋಗ್ಯ ತಪಾಸಣೆ ನಡೆಸುವಂತೆ ತಿಳಿಸಿದರು. ಮೂರು ವರ್ಷದ ಒಳಗಿನ ಮಕ್ಕಳನ್ನು ಕೂಸಿನ ಮನೆಗೆ ಸೇರಿಸುವಂತೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.