
ಹುಬ್ಬಳ್ಳಿ: ‘ಹುಬ್ಬಳ್ಳಿ, ನವಲಗುಂದ ಮತ್ತು ಕುಂದಗೋಳ ಭಾಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಸಮರ್ಪಕವಾಗಿ ಕಾಮಗಾರಿ ನಡೆದಿಲ್ಲ. ಈ ಕುರಿತು 15 ದಿನಗಳಲ್ಲಿ ವರದಿ ಸಲ್ಲಿಸಬೇಕು’ ಎಂದು ಶಾಸಕರಾದ ಎನ್.ಎಚ್. ಕೋನರಡ್ಡಿ ಮತ್ತು ಎಂ.ಆರ್. ಪಾಟೀಲ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇಲ್ಲಿನ ಮಿನಿವಿಧಾನಸೌಧದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಡೆದ ನವಲಗುಂದ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಕುಡಿಯುವ ನೀರಿನ ಯೋಜನೆ ಕುರಿತು ಮಾಹಿತಿ ಪಡೆದು ಅವರು ಮಾತನಾಡಿದರು.
‘ಕೆಲವು ಗ್ರಾಮಗಳಲ್ಲಿ ಪೈಪ್‌ಲೈನ್ ಕಾಮಗಾರಿ ಅಪೂರ್ಣವಾಗಿದ್ದರೆ, ಇನ್ನೂ ಕೆಲವೆಡೆ ಮನೆಗಳಿಗೆ ಸಂಪರ್ಕ ಕಲ್ಪಿಸಿರುವ ನಳಗಳಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಅಷ್ಟರಲ್ಲಾಗಲೇ ಕಾಮಗಾರಿಯನ್ನು ಗುತ್ತಿಗೆದಾರರಿಂದ ಹಸ್ತಾಂತರಿಸಿಕೊಳ್ಳಲಾಗಿದೆ. ಕಾಮಗಾರಿ ಅರ್ಧಕ್ಕೆ ನಿಂತಿರುವ, ಪೂರ್ಣಗೊಂಡಿರುವ ಹಾಗೂ ಬಾಕಿಯಿರುವ ಮಾಹಿತಿ ಸಂಗ್ರಹಿಸಬೇಕು. ತಕ್ಷಣ ಸಮಸ್ಯೆ ಪರಿಹರಿಸಬೇಕು’ ಎಂದು ಸೂಚಿಸಿದರು.
ಎಲ್ ಆ್ಯಂಡ್ ಟಿ ಕಂಪನಿ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸದ ಹಾಗೂ ಅಸಮರ್ಪಕವಾಗಿ ಕಾಮಗಾರಿ ನಡೆಸಿದ್ದಕ್ಕೆ ಕಂಪನಿಗೆ ₹30 ಕೋಟಿ ದಂಡ ಹಾಕಿರುವ ಮಾಹಿತಿ ಪಡೆದ ಕೋನರಡ್ಡಿ, ‘ಅಷ್ಟು ಮೊತ್ತದ ದಂಡ ವಿಧಿಸಿದರೂ ಗುತ್ತಿಗೆದಾರರು ಎಚ್ಚೆತ್ತುಕೊಂಡಿಲ್ಲ ಎಂದರೆ, ಅವರನ್ನು ಕಪ್ಪುಪಟ್ಟಿಗೆ ಸೇರಿಸಿ’ ಎಂದು ಸೂಚಿಸಿದರು.
‘ಮಂಟೂರು ಮತ್ತು ನಾಗರಾಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ಬೇಸಿಗೆ ಆರಂಭವಾಗುವ ಪೂರ್ವ, ಪೈಪ್‌ಲೈನ್ ಕಾಮಗಾರಿ ಪೂರ್ಣಗೊಳಿಸಿ ಓವರ್ ಹೆಡ್ ಟ್ಯಾಂಕ್‌ಗಳಿಗೆ ನಿರು ಸರಾಗವಾಗಿ ಪೂರೈಕೆಯಾಗುವಂತೆ ಮಾಡಬೇಕು. ಕಾಲುವೆ ಮೂಲಕ ಮಲಪ್ರಭಾ ನದಿ ನೀರು ಹರಿಸಲಾಗುತ್ತಿದ್ದು, ಕುಡಿಯುವ ನೀರಿನ ಕೆರೆಗಳನ್ನು ಭರ್ತಿ ಮಾಡಿಕೊಳ್ಳಬೇಕು’ ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ, ತೋಟಗಾರಿಕೆ ಬೆಳೆ ಬೆಳೆಯುವಂತೆ ರೈತರಿಗೆ ಪ್ರೋತ್ಸಾಹ, ಪಶು ಚಿಕಿತ್ಸಾಲಯಗಳ ಸಮಸ್ಯೆಗಳ ಬಗ್ಗೆ ವರದಿ ಸಲ್ಲಿಕೆ, ಹೊಸ ವಸತಿ ನಿಲಯಗಳಿಗೆ ಪ್ರಸ್ತಾವ, ವೈದ್ಯರು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ, ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಸೇರಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು.
ತಾಲ್ಲೂಕು ಪಂಚಾಯಿತಿ ಇಒ ರಾಮಚಂದ್ರ ಹೊಸಮನಿ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಜೆ.ಬಿ. ಮಜ್ಜಗಿ, ಹುಬ್ಬಳ್ಳಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಭೂಮಣ್ಣವರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.