ADVERTISEMENT

ಹುಬ್ಬಳ್ಳಿಯಲ್ಲಿ ಜನಸೇವಕ್‌ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 14:04 IST
Last Updated 9 ಜನವರಿ 2021, 14:04 IST

ಹುಬ್ಬಳ್ಳಿ: ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲುವು ಪಡೆದ ಬಿಜೆಪಿ ಬೆಂಬಲಿತ ಸದಸ್ಯರ ಅಭಿನಂದನಾ ಸಮಾರಂಭ ಭಾನುವಾರ (ಜ. 10) ಬೆಳಿಗ್ಗೆ 11.30ಕ್ಕೆ ಗೋಕುಲ ಗಾರ್ಡನ್‌ನಲ್ಲಿ ಜರುಗಲಿದೆ.

ಈ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶೀ ಮಹೇಶ ಟೆಂಗಿನಕಾಯಿ ‘ಜ. 11ರಿಂದ ಮೂರು ದಿನ ರಾಜ್ಯದಾದ್ಯಂತ ಜಿಲ್ಲಾವಾರು ಸಮಾವೇಶ ನಡೆಯಲಿದ್ದು, ಧಾರವಾಡ ಜಿಲ್ಲೆಯಲ್ಲಿ ಒಂದು ದಿನ ಮೊದಲೇ ಸಮಾವೇಶ ಜರುಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ,ಸಚಿವರಾದ ಜಗದೀಶ ಶೆಟ್ಟರ್‌, ವಿ. ಸೋಮಣ್ಣ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಅಂದಾಜು ಮೂರು ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದರು.

‘11ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ ಕಟೀಲ್‌ ಮೈಸೂರಿನಲ್ಲಿ ಸಮಾವೇಶಕ್ಕೆ ಚಾಲನೆ ನೀಡುವರು. 16 ಮತ್ತು 17ರಂದು ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಮೊದಲ ದಿನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 17ರಂದು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಜನಸೇವಕ್‌ ಸಮಾವೇಶದ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದಿನ ಕಾರ್ಯಕ್ರಮಕ್ಕೆ ಅಂದಾಜು ಒಂದು ಲಕ್ಷ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶೇ 52.4ರಷ್ಟು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದರಿಂದ ಬಿಜೆಪಿ ನಗರ ಪ್ರದೇಶಗಳಿಗಷ್ಟೇ ಸೀಮಿತ ಅಲ್ಲ ಎನ್ನುವುದು ಸಾಬೀತಾಗಿದೆ. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸುತ್ತೇವೆ’ ಎಂದರು.

ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು,ಧಾರವಾಡ ವಿಭಾಗ ಪ್ರಭಾರಿ ‌ಲಿಂಗರಾಜ ಪಾಟೀಲ,ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ರವಿ ದಂಡಿನ್‌, ಸತೀಶಶೇಜಾಡ್ಕರ್‌, ರವಿ ನಾಯ್ಕ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.