ADVERTISEMENT

ಸಿಆರ್‌ಎಫ್‌ ಕಾಮಗಾರಿ ಕಳಪೆ: ತನಿಖೆಗೆ ಜೋಶಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಜೂನ್ 2019, 14:38 IST
Last Updated 28 ಜೂನ್ 2019, 14:38 IST

ಹುಬ್ಬಳ್ಳಿ: ಅವಳಿ ನಗರದಲ್ಲಿ ಕೇಂದ್ರ ರಸ್ತೆ ನಿಧಿ (ಸಿಆರ್‌ಎಫ್‌) ಅಡಿ ನಡೆದಿರುವ ಹಲವಾರು ಕಾಂಕ್ರಿಟ್ ರಸ್ತೆಗಳ ಕಾಮಗಾರಿ ಕಳಪೆಯಾಗಿವೆ. ಆದ್ದರಿಂದ ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಕಲ್ಲಿದ್ದಲು ಹಾಗೂ ಗಣಿ ಇಲಾಖೆಗಳ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅವಧಿಯ ಸರ್ಕಾರದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸುಮಾರು ₹ 600 ಕೋಟಿಗಿಂತಲೂ ಹೆಚ್ಚು ಸಿಆರ್‌ಎಫ್‌ ಅಡಿ ಅನುದಾನ ಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಸುಧಾರಣೆಗಾಗಿ ಮೋದಿ ಸರ್ಕಾರ ಸಾಕಷ್ಟು ಅನುದಾನ ನೀಡಿದೆ. ಆದರೂ, ರಾಜ್ಯ ಸರ್ಕಾರ ಟೆಂಡರ್‌ ಕರೆಯಲು ವಿಳಂಬ ಮಾಡಿತು. ಈಗಿನ ಕಾಂಕ್ರಿಟ್‌ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದೆ ಎಂದು ಸಾರ್ವಜನಿಕರಿಂದ ದೂರು ಬಂದಿವೆ. ಇದರ ಬಗ್ಗೆ ಮಾಧ್ಯಮಗಳಲ್ಲಿಯೂ ಅನೇಕ ವರದಿಗಳು ಪ್ರಕಟವಾಗಿವೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

‘ಅನುದಾನ ಕೇಂದ್ರದ್ದಾದರೂ ಕಾಮಗಾರಿಗಳನ್ನು ರಾಜ್ಯ ಸರ್ಕಾರವೇ ನಿರ್ವಹಿಸುವುದರಿಂದ ಮುಖ್ಯಮಂತ್ರಿ ಈ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

’ಕಾಮಗಾರಿಗಳ ಗುಣಮಟ್ಟದ ಬಗ್ಗೆ ರಾಜ್ಯ ಸರ್ಕಾರ ತನಿಖೆ ಮಾಡಿಸಬೇಕು. ಹೆದ್ದಾರಿ ವಿಭಾಗದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಗುಣಮಟ್ಟದ ಕಾಮಗಾರಿ ಮಾಡಲು ಮತ್ತು ನಿಗದಿತ ಅವಧಿಯಲ್ಲಿ ಮುಗಿಸಲು ಸೂಚನೆ ನೀಡಬೇಕು’ ಎಂದು ಜೋಶಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.