ADVERTISEMENT

ಯೋಜನೆಗಳ ಮಾಹಿತಿ ನೀಡಲು ಸೂಚನೆ

ಕುಂದಗೋಳ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2022, 2:20 IST
Last Updated 10 ಮಾರ್ಚ್ 2022, 2:20 IST

ಕುಂದಗೋಳ: ಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಿಸುವಲ್ಲಿ ತಾಲ್ಲೂಕು ಅಧಿಕಾರಿಗಳು ಮತ್ತು ಪಿಡಿಒಗಳ ಪಾತ್ರ ಮಹತ್ವದ್ದು ಎಂದು ತಾಲ್ಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಟಿ.ಎನ್. ಸಿದ್ದಪ್ಪ ಹೇಳಿದರು. ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಯೋಜನೆಗಳ ಮಾಹಿತಿ ಜನರಿಗೆ ತಲುಪಿಸಿ ಎಂದು ಅವರು ಸೂಚನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್. ಮಠಪತಿ, ಕೋವಿಡ್ ನಂತರ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಶೇ 5ರಷ್ಟು ಹೆಚ್ಚಾಗಿದೆ. ತಾವು ಓದಿದ ಪುಸ್ತಕಗಳನ್ನು ಹಿಂದಿನ ತರಗತಿಗಳ ವಿದ್ಯಾರ್ಥಿಗಳಿಗೆ ತಲುಪಿಸಲು ಸರ್ಕಾರಿ ಶಾಲೆಯ ಮಕ್ಕಳಲ್ಲಿ ಪಠ್ಯಪುಸ್ತಕಗಳಲ್ಲಿ ಆಸಕ್ತಿ ಹೆಚ್ಚಿಸಿ ಅವರನ್ನು ಪ್ರೋತ್ಸಾಹಿಸಲು ಪುಸ್ತಕ ಬಂಡಾರ ಎಂಬ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದರು.

ಇನ್ನೊಂದು ಆಂಬುಲೆನ್ಸ್‌ ಆಸ್ಪತ್ರೆಗೆ ಮಂಜೂರಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಭಾಗೀರತಿ ಮೆಡ್ಲೇರಿ ಹೇಳಿದರು. ಮೆಣಿಸಿನಕಾಯಿ ಬೆಳೆಯ ಬಗ್ಗೆ ಸಂಬಂಧಪಟ್ಟ ತೋಟಗಾರಿಕೆ ಇಲಾಖೆಯ ಅಧಿಕಾರಿ ಸರಿಯಾಗಿ ಮಾಹಿತಿ ಕೂಡದಿದ್ದರಿಂದ ಆಡಳಿತಾಧಿಕಾರಿಗಳು ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿದರು.

ADVERTISEMENT

ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಾಹಕ ಅಧಿಕಾರಿ ಡಾ. ಮಹೇಶ ಕುರಿ ಅವರಿಗೆ ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನಂದಾ ಹುರಳಿ, ಗ್ರೇಡ್-2 ತಹಶೀಲ್ದಾರ್ ಮಹಾಂತೇಶ ನರಸಪ್ಪನವರ, ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ. ಬಿ.ಬಿ. ಆವಾರಿ, ರೇಷ್ಮೆ ಇಲಾಖೆಯ ಎಂ.ಎಂ.ಗದಗಿನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.