ADVERTISEMENT

ಹುಬ್ಬಳ್ಳಿ | ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕಿ ಕಾರ್ಯಾಲಯ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2023, 15:50 IST
Last Updated 24 ಜುಲೈ 2023, 15:50 IST

ಹುಬ್ಬಳ್ಳಿ: ‘ನಗರದ ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕಿಯ ಕಾರ್ಯಾಲಯ ಉದ್ಘಾಟನೆ ಸಮಾರಂಭವನ್ನು ಜುಲೈ 26ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಸುವರ್ಣಾ ಕಲ್ಲಕುಂಟಲಾ ಹೇಳಿದರು.

ಇಲ್ಲಿಯ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಶಾಸಕ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.

ಶಾಸಕ ಎನ್.ಎಚ್.ಕೋನರೆಡ್ಡಿ, ಮಹಾನಗರ ಪಾಲಿಕೆ ಮೇಯರ್‌ ವೀಣಾ ಬಾರದ್ವಾಡ, ಉಪ ಮೇಯರ್‌ ಸತೀಶ ಹಾನಗಲ್ಲ, ಧಾರವಾಡ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫಹುಸೇನ್ ಹಳ್ಳೂರ, ಶಿವಲೀಲಾ ವಿನಯ ಕುಲಕರ್ಣಿ, ದೀಪಾ ಗೌರಿ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಸಚಿವ ಸಂತೋಷ ಲಾಡ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ದಂಪತಿಯನ್ನು ಸನ್ಮಾನಿಸಲಾಗುವುದು ಎಂದರು.

ADVERTISEMENT

ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂಬ ಆರೋಪ

‘ಪಾಲಿಕೆ ಮೇಯರ್‌ ವೀಣಾ ಬಾರದ್ವಾಡ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಹೊಸದಾಗಿ ನೇಮಕವಾದ ಹು–ಧಾ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರು ಪೌರಕಾರ್ಮಿಕರನ್ನು ಗೌರವದಿಂದ ಕಾಣದೇ, ಅವರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಮಳೆಯಿಂದಾಗಿ ತೀವ್ರ ಹಾನಿಗಳಾಗಿದ್ದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದಿನ ಬಜೆಟ್‌ನಲ್ಲಿ ಪ್ರತಿ ವಾರ್ಡ್‌ಗೆ ₹50 ಲಕ್ಷ ಅನುದಾನ ನೀಡುವುದಾಗಿ ನಿರ್ಧರಿಸಲಾಗಿತ್ತು. ಆದರೆ ಈವರೆಗೂ ಅನುದಾನವನ್ನು ನೀಡಿಲ್ಲ. ಪೌರಕಾರ್ಮಿಕರಿಗೆ ಕಳಪೆ ಮಟ್ಟದ ಉಪಾಹಾರ ನೀಡಲಾಗುತ್ತಿದೆ. ಈ ಎಲ್ಲ ಸಮಸ್ಯೆಗಳ ಕುರಿತು ಮುಂಬರುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.