ADVERTISEMENT

ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 16:57 IST
Last Updated 24 ಜೂನ್ 2025, 16:57 IST
ಮಹೇಶ ಟೆಂಗಿನಕಾಯಿ, ಶಾಸಕ
ಮಹೇಶ ಟೆಂಗಿನಕಾಯಿ, ಶಾಸಕ   

ಹುಬ್ಬಳ್ಳಿ: ‘ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಸಚಿವ ಜಮೀರ್ ಅಹ್ಮದ್ ಖಾನ್‌ ರಾಜೀನಾಮೆ ನೀಡಬೇಕು’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ. ಹಣ ನೀಡಿದವರಿಗೆ ಮಾತ್ರ ವಸತಿ ಯೋಜನೆ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಆ ಪಕ್ಷದ ಶಾಸಕ ಬಿ.ಆರ್‌.ಪಾಟೀಲ ಆರೋಪಿಸಿದ್ದಾರೆ. ಈಗಲಾದರೂ ಮುಖ್ಯಮಂತ್ರಿ ಸಚಿವ ಜಮೀರ್ ಅವರನ್ನು ಸಂಪುಟದಿಂದ ಕೈಬಿಡಬೇಕು’ ಎಂದರು.   

‘ಶಾಸಕ ರಾಜು ಕಾಗೆ ಅವರು ಸಹ ಬಿ.ಆರ್.ಪಾಟೀಲ ಅವರ ಆರೋಪದ ಪೂರಕವಾಗಿ ಮಾತನಾಡಿದ್ದಾರೆ. ಹಲವು ಸಚಿವರ ಮೇಲೆ‌ ಶಾಸಕರು ಆರೋಪ ಮಾಡುತ್ತಿದ್ದಾರೆ’ ಎಂದು ಹೇಳಿದರು. 

ADVERTISEMENT

‘ನಮ್ಮತ್ರ ದುಡ್ಡಿಲ್ಲ; ಕೇಂದ್ರವನ್ನು ಕೇಳೋಣ’ ಎಂಬ ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಈ ಸರ್ಕಾರ ಬಂದಾಗಿನಿಂದ ಶಾಸಕರಿಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಧ್ವನಿ ಎತ್ತಿದ್ದೇನೆ. ಆದರೂ ಮುಖ್ಯಮಂತ್ರಿ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಸುಳ್ಳು ಹೇಳುತ್ತಿದ್ದರು. ಈಗ ಸತ್ಯ ಹೊರಬಂದಿದೆ’ ಎಂದರು.

‘ಕ್ಷೇತ್ರದ ಅಭಿವೃದ್ಧಿಗೆ ಅನುದಾನ‌ ಕೊರತೆ ಇದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ನಾವು ಈ ಬಗ್ಗೆ ಮಾತನಾಡಿದಾಗ ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ಅಗತ್ಯವಿದ್ದಾಗ ರಾಜ್ಯಕ್ಕೆ ಅನುದಾನ ಬಿಡುಗಡೆ ಮಾಡಿದೆ’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.