ಧಾರವಾಡ: ಇದೇ ಜನವರಿ 26ರಿಂದ ಫೆಬ್ರುವರಿ 24ರವರೆಗೆ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಉಸ್ತುವಾರಿ ಸಚಿವರು ಜಾಥಾಗೆ ಚಾಲನೆ ನೀಡುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಕೆ.ಸ್ವರೂಪಾ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮಾತನಾಡಿದರು.
ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರವು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಜಾಥಾ ಉದ್ದೇಶ ಎಂದು ಹೇಳಿದರು.
ಸ್ತಬ್ಧಚಿತ್ರವು ಫೆ.25ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ಜಾಗೃತಿ ಸಮಾವೇಶ ತಲುಪಲಿದೆ. ಜಾಥಾ ಯಶಸ್ವಿಗೊಳಿಸಲು ಎಲ್ಲ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಹೆಚ್ಚುವರಿ ನಿರ್ದೇಶಕ ಅಲ್ಲಾ ಭಕ್ಷ್ ಎಂ.ಎಸ್. ಮಾತನಾಡಿ, ಜಾಥಾ ವೇಳಾಪಟ್ಟಿಯನ್ನು ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಮುಂಚಿತವಾಗಿ ನೀಡಲಾಗುವುದು. ಆಯಾ ಗ್ರಾಮ ಪಂಚಾಯಿತಿ ಪಿಡಿಒ ಸಹಿತ ಇತರ ಇಲಾಖೆ ಅಧಿಕಾರಿಗಳು ಜಾಥಾ ಸ್ವಾಗತಿಸಿ ಜನರಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಡಿಸಿಪಿ ರಾಜೀವ್ ಎಂ., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಬರಮನಿ, ಜಿಲ್ಲಾ ಆರೋಗ್ಯಾಧಿಕಾರಿ ಶಶಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಸಂಗಪ್ಪ ಗಾಬಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೆರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.