ADVERTISEMENT

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‌ ಸಿಟಿ ಕಾಮಗಾರಿ ಬೇಗ ಮುಗಿಸಲು ಶೆಟ್ಟರ್‌ ಸೂಚನೆ

ಸ್ಮಾರ್ಟ್‌ ಸಿಟಿ ಯೋಜನೆ: ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 9:44 IST
Last Updated 21 ಜೂನ್ 2020, 9:44 IST
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು   
""

ಹುಬ್ಬಳ್ಳಿ: ಅವಳಿನಗರದಲ್ಲಿ ಕುಂಟುತ್ತಾ ಸಾಗಿರುವ ಸ್ಮಾರ್ಟ್‌ ಸಿಟಿ ಯೋಜನೆಯ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಶನಿವಾರ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಕುರಿತು ಸ್ಮಾರ್ಟ್‌ ಸಿಟಿ ಅಧಿಕಾರಿಗಳು, ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಸಚಿವ ಜೋಶಿ ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗಹಿಸಿದ್ದರು.

ಹುಬ್ಬಳ್ಳಿಯ ಉಣಕಲ್ ಕೆರೆ ಅಭಿವೃದ್ಧಿ, ಜನತಾ ಬಜಾರ್‌ನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ, ಕ್ರೀಡಾ ಸಂಕೀರ್ಣ ಹಾಗೂ ಕಮಾಂಡಿಂಗ್ ಸೆಂಟರ್ ಸೇರಿದಂತೆ, ವಿವಿಧ ಕಾಮಗಾರಿಗಳ ಪ್ರಗತಿಯ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು. ಉಣಕಲ್ ಕೆರೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು ಮತ್ತು ಶಾಸಕರು, ಬೇಗನೆ ಕಾಮಗಾರಿ ಮುಗಿಸುವಂತೆ ಸೂಚನೆ ನೀಡಿದರು.

ADVERTISEMENT

₹135 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಿರುವ ಒಳಚರಂಡಿ ಹಾಗೂ ಗ್ರೀನ್ ಕಾರಿಡಾರ್ ಯೋಜನೆ ಕುರಿತು ವಿವರವನ್ನು ಜನಪ್ರತಿನಿಧಿಗಳು ಪಡೆದರು. ಉಣಕಲ್ ಕೆರೆ ನಿರ್ವಹಣೆ ಮತ್ತು ಅದರಿಂದ ಬರುವ ಆದಾಯದ ಕುರಿತು ತಜ್ಞರ ಸಮಿತಿಯನ್ನು ರಚಿಸಿ ಅದರ ವರದಿ ನೀಡಬೇಕು ಎಂದರು.

ಮುಂದಿನ ದಿನಗಳಲ್ಲಿ ಯಾವುದೇ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮೊದಲು ತಜ್ಞರ ಸಮಿತಿಯನ್ನು ರಚಿಸಬೇಕು. ಸಮಿತಿ ವರದಿ ಒಪ್ಪಿಸಿದ ನಂತರವೇ ಉಳಿದ ಯೋಜನೆಗಳ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ನಗರದ ಹೃದಯಭಾಗದಲ್ಲಿರುವ ಜನತಾ ಬಜಾರ್ ಸ್ಥಳದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ, ಅಲ್ಲಿರುವ ವ್ಯಾಪಾರಿಗಳನ್ನು ಸ್ಥಳಾಂತರಿಸುವಂತೆ ಸೂಚಿಸಲಾಯಿತು. ತಾತ್ಕಾಲಿಕವಾಗಿ ಅವರಿಗೆ ಬೇರೆ ಕಡೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ದೀಪಾ ಚೋಳನ್, ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ, ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.