
ಹುಬ್ಬಳ್ಳಿ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿದೆ. ಆದರೆ, ವಿರೋಧ ಪಕ್ಷದವರು ಸರ್ಕಾರದಲ್ಲಿ ಅನುದಾನವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ’ ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.
ಇಲ್ಲಿನ ಪೂರ್ವ ಕ್ಷೇತ್ರದ ಸೆಟಲ್‌ಮೆಂಟ್ ಕ್ರಿಶ್ಚಿಯನ್ ಕಾಲೋನಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿ, ಸೆಟಲ್‌ಮೆಂಟ್‌ನಲ್ಲಿ ₹10ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಎಸ್.ಎಂ. ಕೃಷ್ಣ ನಗರದಲ್ಲಿ ₹50ಲಕ್ಷ ಅನುದಾನದಲ್ಲಿ ಉದ್ಯಾನವನ ಅಭಿವೃದ್ಧಿ ಸೇರಿ ಒಟ್ಟು ₹1.10ಕೋಟಿ ಮೊತ್ತದ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿಗಾಗಿ ಅನುದಾನ ತರಲು ಹೆಣಗಾಡುವ ಪರಿಸ್ಥಿತಿ ಇತ್ತು. ಅತ್ಯುತ್ತಮ ವಿನ್ಯಾಸ ಮತ್ತು ಉತ್ತಮ ಗುಣಮಟ್ಟದ ಕಾಮಗಾರಿಯಿಂದ ಯೋಜನೆ ಸಫಲವಾದಾಗ ಮಾತ್ರ ಸರ್ಕಾರದ ಅನುದಾನಕ್ಕೆ ನ್ಯಾಯ ದೊರಕುತ್ತದೆ. ಹೀಗಾಗಿ ಕಾಮಗಾರಿಯನ್ನು ಉತ್ತಮ ರೀತಿಯಲ್ಲಿ ಮಾಡಬೇಕು ಎಂದು ಗುತ್ತಿಗೆದಾರರಿಗೆ ಹೇಳಿದರು.
ಕಾಂಗ್ರೆಸ್ ಮುಖಂಡ ಶಾಮ ಜಾಧವ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಕ್ಷೇತ್ರದಲ್ಲಿ ದೊಡ್ಡಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಸೆಟಲ್‌ಮೆಂಟ್ ಭಾಗವನ್ನು ಪೂರ್ವ ಕ್ಷೇತ್ರದಲ್ಲೇ ಅತ್ಯಂತ ಹಿಂದುಳಿದ ಪ್ರದೇಶವೆಂದು ಗುರುತಿಸಲಾಗುತ್ತಿತ್ತು. ಇಂದು ಕ್ಷೇತ್ರದಲ್ಲೇ ಹೈಟೆಕ್ ನಗರವಾಗಿ ಅಭಿವೃದ್ಧಿ ಹೊಂದಿದೆ. ಸುಸಜ್ಜಿತ ಸಿಸಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿ ₹5ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ಈ ಭಾಗಕ್ಕೆ ಹೊಸರೂಪ ನೀಡಿರುವ ಶಾಸಕರಿಗೆ ಚಿರಋಣಿ ಎಂದರು.
ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಪಂಪಣ್ಣ ಅಂಬಿಗೇರಿ, ಬಾಬಾಜಾನ್ ಕಾರಡಗಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯಕುಮಾರ್, ಗುತ್ತಿಗೆದಾರರು, ಕಾಂಗ್ರೆಸ್ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.