ADVERTISEMENT

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2023, 10:21 IST
Last Updated 14 ಸೆಪ್ಟೆಂಬರ್ 2023, 10:21 IST
<div class="paragraphs"><p>ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಗುರುವಾರ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.</p></div>

ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಗುರುವಾರ ಶಾಸಕ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.

   

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿ ಗುರುವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಅನುಮತಿ ಸಿಕ್ಕಿದೆ. ಆದರೆ, ಪಾಲಿಕೆ ಆಯುಕ್ತರು ಅಧಿಕೃತವಾಗಿ ಅನುಮತಿ ನೀಡುತ್ತಿಲ್ಲ. ಅದಕ್ಕೆ ಗಣೇಶೋತ್ಸವ ಸಮಿತಿಯ ಪರವಾಗಿ ಆಯುಕ್ತರನ್ನು ಭೇಟಿಯಾಗಿದ್ದೇವೆ. ಆಯುಕ್ತರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಅನುಮತಿ ಕೊಡುತ್ತಿಲ್ಲ. ಅನುಮತಿ ಸಿಗುವವರೆಗೆ ಆಯುಕ್ತರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸುತ್ತೇವೆ’ ಎಂದರು.

ADVERTISEMENT

‘ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರಲು‌‌‌ ಮುಸ್ಲಿಮರಷ್ಟೇ ಅಲ್ಲ, ಹಿಂದೂಗಳು ಕೂಡ ಮತ ನೀಡಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಅರಿಯಬೇಕು’ ಎಂದು ಹೇಳಿದರು.

‘ಈದ್ಗಾ ಮೈದಾನವು ಮಹಾನಗರ ಪಾಲಿಕೆ ಆಸ್ತಿ ಎಂಬುದನ್ನು ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಅಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆಗೆ ಅನುಮತಿ ನೀಡಲು ಪಾಲಿಕೆಗೆ ಅವಕಾಶವಿದೆ. ಬರೀ ಮುಸ್ಲಿಂ ಧರ್ಮೀಯರ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡುವಂತೆ ಎಲ್ಲೂ ಹೇಳಿಲ್ಲ. ಹೀಗಾಗಿ ಕಳೆದ ಸಲದಂತೆ ಈ ವರ್ಷವೂ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಬೇಕು’ ಎಂದು ಅವರು ಆಗ್ರಹಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರನ್ನು ಮಧ್ಯಾಹ್ನ 12ಕ್ಕೆ ಭೇಟಿ ಮಾಡಿದ ಬಿಜೆಪಿ ಮುಖಂಡರು ಎರಡು ಗಂಟೆ ಮಾತುಕತೆ ನಡೆಸಿದರು. ಅನುಮತಿ ಸಿಗದ ಕಾರಣ ಹೊರಬಂದು ಪ್ರತಿಭಟನೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.