ADVERTISEMENT

ಶೆಟ್ಟರ್ ಬಿಜೆಪಿ ಸೇರ್ಪಡೆ.. ವರಿಷ್ಠರ ತೀರ್ಮಾನ ಸ್ವಾಗತಿಸುತ್ತೇ‌ನೆ: ಟೆಂಗಿನಕಾಯಿ

​ಪ್ರಜಾವಾಣಿ ವಾರ್ತೆ
Published 25 ಜನವರಿ 2024, 8:33 IST
Last Updated 25 ಜನವರಿ 2024, 8:33 IST
ಮಹೇಶ್‌ ಟೆಂಗಿನಕಾಯಿ
ಮಹೇಶ್‌ ಟೆಂಗಿನಕಾಯಿ   ಪ್ರಜಾವಾಣಿ ಚಿತ್ರ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಅವರು ವಾಪಸ್ ಬಿಜೆಪಿ ಸೇರಿದ್ದು, ಪಕ್ಷದ ವರಿಷ್ಠರು ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಮುನಿಸು ಇಲ್ಲ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಅನೇಕ ಕಾಂಗ್ರೆಸ್, ಜೆಡಿಎಸ್ ನಾಯಕರು ಈಗಾಗಲೇ ಬಿಜೆಪಿಗೆ ಬಂದಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದರು.

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವುದೊಂದೆ ನಮ್ಮ ಗುರಿ. ಅದರ ಮುಂದೆ ಎಲ್ಲವೂ ನಗಣ್ಯ ಎಂದರು.

ADVERTISEMENT

ಧಾರವಾಡ ಲೋಕಸಭಾ ಕ್ಷೇತ್ರದಿಂದ ಜಗದೀಶ ಶೆಟ್ಟರ್ ಅವರು ಅಭ್ಯರ್ಥಿಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಈಗಾಗಲೇ ಪ್ರಲ್ಹಾದ ಜೋಶಿ ಅವರು ಸಂಸದ, ಕೇಂದ್ರ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಈ ವಿಷಯವಾಗಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಟೆಂಗಿನಕಾಯಿ, ಪಕ್ಷಕ್ಕೆ ಯಾವುದೇ ವ್ಯಕ್ತಿ ಅನಿವಾರ್ಯ ಅಲ್ಲ. ಬಿಜೆಪಿ ಬಲಿಷ್ಠವಾಗಿದೆ. ಶೆಟ್ಟರ್ ಅವರಿಗೆ ಕಾಂಗ್ರೆಸ್ ಬೇಸರವಾದ ಕುರಿತು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಜಗದೀಶ ಶೆಟ್ಟರ್ ಕಾಂಗ್ರೆಸ್‌ಗೆ ಸೇರಿ, ಹುಬ್ಬಳ್ಳಿ ಧಾರವಾಡ ಸೆಂಟಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ ಟೆಂಗಿನಕಾಯಿ ವಿರುದ್ಧ ಸೋಲು ಕಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.