
ನವಲಗುಂದ: ದ್ವಿಚಕ್ರ ವಾಹನ ಚಲಾಯಿಸುವ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಬೇಕು. ಅಪಘಾತ ಸಂಭವಿಸಿದಾಗ ಸವಾರರ ಪ್ರಾಣ ರಕ್ಷಿಸಬಲ್ಲದು ಎಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ಮಂಜುನಾಥ ಪಾನಘಂಟಿ ಹೇಳಿದರು.
ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಗುರುವಾರ ಹಮ್ಮಿಕೊಂಡ ಬೇಟಿ ಬಚಾವೋ ಬೇಟಿ ಪಡಾವೋ, ಬಾಲ್ಯ ವಿವಾಹ ಮುಕ್ತ ಭಾರತ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಬೇಕು. ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ಗ್ರಾಮ ಮಟ್ಟದವರೆಗೂ ತಲುಪಿಸುವ ಕೆಲಸ ಆಗಬೇಕು ಎಂದರು.
ದಿವಾಣಿ ನ್ಯಾಯಾಧೀಶರಾದ ನವೀನ ಡಿಸೋಜಾ ಮಾತನಾಡಿದರು. ನಂತರ ಕೋರ್ಟ್ ಅವರಣದಿಂದ ಪ್ರಮುಖ ಬೀದಿಗಳಲ್ಲಿ ಜಾಥಾ ಮೆರವಣಿಗೆ ಜರುಗಿತು. ತಹಶೀಲ್ದಾರ್ ಸುಧೀರ ಸಾವುಕಾರ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಸಿಡಿಪಿಒ ಗಾಯತ್ರಿ ಪಾಟೀಲ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್ಐ ಜನಾರ್ಧನ ಭಟ್ರಳ್ಳಿ ಸೇರಿದಂತೆ ಅಧಿಕಾರಿಗಳು ಮತ್ತು ವಿವಿಧ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.