ADVERTISEMENT

ಕರ್ನಾಟಕ ಬಂದ್‌ ಇಲ್ಲ; ಪ್ರತಿಭಟನೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 9:01 IST
Last Updated 13 ಫೆಬ್ರುವರಿ 2020, 9:01 IST

ಹುಬ್ಬಳ್ಳಿ‌: ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಅನುಷ್ಠಾನಗೊಳಿಸಬೇಕು ಎಂದು ಕನ್ನಡಪರ ಸಂಘಟನೆಗಳು ಫೆ. 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಕೆಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಕರ್ನಾಟಕ ನವ ನಿರ್ಮಾಣ ವೇದಿಕೆ, ಕರ್ನಾಟಕ ಸಂಗ್ರಾಮ ಸೇನೆ, ಕನ್ನಡ ಕ್ರಾಂತಿ ದೀಪ, ಭರತ್‌ ಸಿಂಗ್‌ ಯೂತ್ ಪವರ್‌ ಸಂಘಟನೆ, ಸಮಗ್ರ ಕರ್ನಾಟಕ ರಕ್ಷಣಾ ಸೇನೆ ಹಾಗೂ ಇತರ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆ 9.30ಕ್ಕೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಂತರ ಪ್ರತಿಭಟನಾ ರ‍್ಯಾಲಿ ಮೂಲಕ ತಹಶೀಲ್ದಾರ್‌ ಕಚೇರಿಗೆ ತೆರಳಿ ಮನವಿ ಸಲ್ಲಿಸಲಿದ್ದಾರೆ.

‘ಸ್ವಯಂ ಪ್ರೇರಿತವಾಗಿ ಬಂದ್‌ನಲ್ಲಿ ಪಾಲ್ಗೊಳ್ಳಬಹುದು. ಒತ್ತಾಯ ಪೂರ್ವಕವಾಗಿ ಬಂದ್‌ ಮಾಡುವುದಿಲ್ಲ’ ಎಂದು ಸಂಘಟನೆಗಳ ಪದಾಧಿಕಾರಿಗಳು ಪೊಲೀಸ್‌ ಇಲಾಖೆಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿದೆ.

ಶಾಲಾ–ಕಾಲೇಜುಗಳಿಗೆ ರಜೆ ಇಲ್ಲ. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಆಟೊ ರಿಕ್ಷಾ, ಕ್ಯಾಬ್‌ ಹಾಗೂ ಬಸ್‌ಗಳ ಸೇವೆ ಸಂಚಾರ ಎಂದಿನಂತೆಯೇ ಇರಲಿವೆ.

‘ಶಾಂತಿಯುತವಾಗಿ ಪ್ರತಿಭಟನೆ ಮಾಡುವುದಾಗಿ ಕೆಲವು ಸಂಘಟನೆಗಳು ವಿನಂತಿಸಿಕೊಂಡಿವೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ’ ಎಂದು ಪೊಲೀಸ್‌ ಕಮಿಷನರ್‌ ಆರ್‌. ದಿಲೀಪ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.