ADVERTISEMENT

ತೈಲ ಬೆಲೆ ಏರಿಕೆ: ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 14:49 IST
Last Updated 6 ಜುಲೈ 2019, 14:49 IST
ಪೆಟ್ರೋಲ್‌, ಡೀಸೆಲ್‌ ಮೇಲಿನ ಸೆಸ್‌ ಏರಿಕೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು
ಪೆಟ್ರೋಲ್‌, ಡೀಸೆಲ್‌ ಮೇಲಿನ ಸೆಸ್‌ ಏರಿಕೆ ಮಾಡಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ಕೇಂದ್ರ ಬಜೆಟ್‌ನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಸೆಸ್‌ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಘಟದ ವತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸ್ಟೇಷನ್‌ ರಸ್ತೆಯ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಡವರ ಬದುಕಿನ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧ್ಯಕ್ಷ ಅಲ್ತಾಫ್‌ ಹಳ್ಳೂರ ಮಾತನಾಡಿ, ಐದು ವರ್ಷ ಆಡಳಿತ ನಡೆಸಿದ ಮೋದಿ ವಿದೇಶ ಸುತ್ತುವುದರಲ್ಲಿಯೇ ಕಾಲ ಕಳೆದರು. ಇದೀಗ ಎರಡನೇ ಅವಧಿಗೆ ಪ್ರಧಾನಿ ಆಗಿದ್ದು, ಆರಂಭದಲ್ಲಿಯೇ ಶ್ರೀಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದ್ದಾರೆ. ಬಜೆಟ್‌ನಲ್ಲಿ ಪೆಟ್ರೋಲ್‌, ಡೀಸೆಲ್‌ ಸೆಸ್‌ ಏರಿಕೆ ಮಾಡಿ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆಗೆ ಕಾರಣರಾಗಿದ್ದಾರೆ. ಕೂಡಲೇ ಸೆಸ್‌ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ ಜನವಿರೋಧಿಯಾಗಿದೆ. ಜನಸಾಮಾನ್ಯರಿಗೆ ಪ್ರಯೋಜನವಾಗುವ ಯಾವ ಅಂಶಗಳೂ ಇಲ್ಲ. ಕಳೆದ ಬಾರಿ ಪ್ರತಿಯೊಂದು ಕುಟುಂಬಕ್ಕೂ ಮನೆ, ಗ್ಯಾಸ್‌ ಒದಗಿಸಲಾಗುವುದು ಎಂದು ಹೇಳಿದ್ದರು. ಈಗ ಅದನ್ನೇ ಮುಂದುವರೆಸಿದ್ದಾರೆ. ರೈತರಿಗೆ ಅನುಕೂಲವಾಗುವ ಯಾವ ಯೋಜನೆಗಳನ್ನು ಘೋಷಿಸಿಲ್ಲ ಎಂದು ಮುಖಂಡ ಅನ್ವರ್‌ ಮುಧೋಳ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಸದಾನಂದ ಡಂಗನವರ, ರಜತ್‌ ಉಳ್ಳಾಗಡ್ಡಿಮಠ, ಅರವಿಂದ ಕಟಗಿ, ದಶರಥ ವಾಲಿ, ದೀಪಾ ಗೌರಿ, ದಾಕ್ಷಾಯಿಣಿ ಹಿರೇಮಠ, ತಾರಾದೇವಿ ವಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.