ADVERTISEMENT

ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ, ಧರ್ಮ ಕಾಲಂನಲ್ಲಿ ಹಿಂದೂ ಬರೆಸಿ: ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 4:47 IST
Last Updated 18 ಸೆಪ್ಟೆಂಬರ್ 2025, 4:47 IST
ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ‘ಪಂಚಮಸಾಲಿ ಜಾತಿ ಗಣತಿ ಜಾಗೃತಿ ಸಭೆ’ಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು
ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ‘ಪಂಚಮಸಾಲಿ ಜಾತಿ ಗಣತಿ ಜಾಗೃತಿ ಸಭೆ’ಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು   

ಹುಬ್ಬಳ್ಳಿ: ‘ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯಲ್ಲಿ ಪಂಚಮಸಾಲಿ ಸಮಾಜದವರು ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ, ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಬುಧವಾರ ‘ಪಂಚಮಸಾಲಿ ಜಾತಿ ಗಣತಿ ಜಾಗೃತಿ ಸಭೆ’ಯಲ್ಲಿ ಮಾತನಾಡಿದ ಅವರು, ‘ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಸಲು ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ’ ಎಂದರು.

ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಲು ಸಭೆಯಲ್ಲಿ ಭಾಗವಹಿಸಿದ್ದ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ವಾಗ್ವಾದ ನಡೆಸಿದರು. ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸುವಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. 

ADVERTISEMENT

ನಂತರ ಸ್ವಾಮೀಜಿ ಮಾತನಾಡಿ, ‘ಧರ್ಮದ ಕಾಲಂನಲ್ಲಿ ಸದ್ಯ ಲಿಂಗಾಯತ ಎಂಬುದು ಇಲ್ಲ. ಲಿಂಗಾಯತ ಧರ್ಮವಾಗಬೇಕು ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ. ಮಾನ್ಯತೆ ಸಿಕ್ಕಾಗ ಲಿಂಗಾಯತ ಎಂದು ನಮೂದಿಸೋಣ. ಸದ್ಯ ನಡೆಯುವ ಸಮೀಕ್ಷೆಯಲ್ಲಿ ಹಿಂದೂ ಎಂದು ಬರೆಸೋಣ’ ಎಂದರು. ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದರು. 

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಜಾತಿ ಸಮೀಕ್ಷೆ ಮಾಡುತ್ತಿದೆ. ಈ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಸೆ.22ರಿಂದ ಅ.7ರವರೆಗೆ ಸಮೀಕ್ಷೆ ನಡೆಯಲಿದೆ. 15 ದಿನಗಳಲ್ಲಿ 7 ಕೋಟಿ ಜನರಿರುವ ರಾಜ್ಯದಲ್ಲಿ ಸಮರ್ಪಕವಾಗಿ ಸಮೀಕ್ಷೆ ನಡೆಸುವುದು ಕಷ್ಟ. ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಸಮೀಕ್ಷೆ ತಡೆ ಹಿಡಿಯುವುದು ಸೂಕ್ತ. ಈ ನಿಟ್ಟಿನಲ್ಲಿ ಪಂಚಮಸಾಲಿ ಸಮಾಜದ ವಕೀಲರ ಘಟಕದವರು ಪಿಐಎಲ್‌ ಹಾಕಬೇಕು’ ಎಂದರು.

ಅದರ ನಂತರವೂ ಸಮೀಕ್ಷೆ ನಡೆದರೆ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು. ಇತರೆ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಿದ ಮಾತ್ರಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಗುವುದಿಲ್ಲ. ಇದನ್ನು ಸಮಾಜದವರು ಅರ್ಥ ಮಾಡಿಕೊಳ್ಳಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ‘ರಾಜ್ಯ ಸರ್ಕಾರ ನಡೆಸಲಿರುವ ಸಮೀಕ್ಷೆಯ ಹಿಂದೆ ಷಡ್ಯಂತ್ರ ಇದೆ. ಯಾರೂ ಕೇಳದ ಜಾತಿಗಳನ್ನು ಜಾತಿ ಪಟ್ಟಿಯಲ್ಲಿ ಸೇರಿಸಲಾಗಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಕಥೋಲಿಕ್‌, ಪ್ರೊಟೆಸ್ಟಂಟ್‌ ಪಂಗಡಗಳಿವೆ. ಅದನ್ನು ಬಿಟ್ಟು ಕುರುಬ ಕ್ರಿಶ್ಚಿಯನ್‌, ನೇಕಾರ ಕ್ರಿಶ್ಚಿಯನ್ ಎಂಬ ಜಾತಿ ಸೇರಿಸಿರುವುದರ ಹಿಂದೆ ಕುತಂತ್ರ ಅಡಗಿದೆ ಎಂದು ಹೇಳಿದರು. ಧಾರವಾಡ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಗದಗ, ಕೊಪ್ಪಳ, ಬೆಂಗಳೂರು, ಮೈಸೂರು ಜಿಲ್ಲೆಗಳ ಜನರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬಸವ ಜಯಮೃತ್ಯಂಜಯ ಸ್ವಾಮೀಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.