ADVERTISEMENT

‘ಬೆಲೆ ಏರಿಕೆಗೆ ಜನ ಹೈರಾಣು’

ಹುಬ್ಬಳ್ಳಿಯಲ್ಲಿ ಮೇ 11ರಂದು ಜನಾಕ್ರೋಶ ಯಾತ್ರೆಯ ಸಮಾರೋಪ

​ಪ್ರಜಾವಾಣಿ ವಾರ್ತೆ
Published 6 ಮೇ 2025, 13:35 IST
Last Updated 6 ಮೇ 2025, 13:35 IST
ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು.
ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು.   

ಹುಬ್ಬಳ್ಳಿ: ರಾಜ್ಯದ ಕಾಂಗ್ರೆಸ್‌ ಸರ್ಕಾರ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಸಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಹೈರಾಣ ಆಗಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. 

ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ  ಉದ್ದೇಶಿಸಿ ಅವರು ಮಾತನಾಡಿದರು. 

‘ಐದು ಗ್ಯಾರಂಟಿಗಳನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌, ಈಗ ಎಲ್ಲ ಜೀವನಾವಶ್ಯಕ ವಸ್ತುಗಳ ದರ ಹೆಚ್ಚಿಸಿದೆ. ತೆರಿಗೆ ದರ ಕೂಡ ಏರಿಸಿದೆ. ಬೆಲೆ ಏರಿಕೆಯಲ್ಲಿ ರಾಜ್ಯ ಸರ್ಕಾರ ದಾಖಲೆ ಮಾಡಿದೆ’ ಎಂದು ನುಡಿದರು. 

ADVERTISEMENT

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ, ಎನ್.ರವಿಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ‘ಜನಾಕ್ರೋಶ ಸಭೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕನಿಷ್ಠ ಹತ್ತರಿಂದ ಹದಿನೈದು ಸಾವಿರ ಜನ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ. ಇದೇ ರೀತಿ ಮೇ 11ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಯಾತ್ರೆಯ ಸಮಾರೋಪ ಸಮಾರಂಭವನ್ನು ಕೂಡ ಯಶಸ್ವಿಗೊಳಿಸಬೇಕು. ಪಕ್ಷದ ರಾಷ್ಟ್ರೀಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ’ ಎಂದು ನುಡಿದರು.

‘ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರು ಕಂಗಾಲಾಗಿದ್ದಾರೆ ಹಾಗೂ ಹಿಡಿಶಾಪ ಹಾಕುತ್ತಿದ್ದಾರೆ.  ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದೆ. ತುಘಲಕ್‌ ದರ್ಬಾರ್ ನಡೆದಿದೆ’ ಎಂದು ದೂರಿದರು.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯ ಸರ್ಕಾರ ಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ಈ ಹಿಂದೆ ನಮ್ಮ ಸರ್ಕಾರವು ಅಧಿಕಾರದಲ್ಲಿತ್ತು. ಆದರೆ ಈ ರೀತಿ ಸರ್ಕಾರ ನಡೆಸಿಲ್ಲ. ರಾಜ್ಯ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಈ ಸರ್ಕಾರ ಬರೀ ಸುಳ್ಳು ಹೇಳುವುದರಲ್ಲಿ ಸಮಯ ಕಳೆಯುತ್ತಿದೆ. ಇದೊಂದು ಅವಿವೇಕಿ ಸರ್ಕಾರ’ ಎಂದು ದೂರಿದರು.

ಸಭೆಯ ಅಧ್ಯಕ್ಷತೆಯನ್ನು ಪಾಲಿಕೆ ಸದಸ್ಯ ತಿಪ್ಪಣ್ಣ ಮಜ್ಜಗಿ ವಹಿಸಿದ್ದರು. ಗ್ರಾಮಾಂತರ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಲಿಂಗರಾಜ ಪಾಟೀಲ,  ಮಹೇಂದ್ರ ಕೌತಾಳ, ಮಲ್ಲಿಕಾರ್ಜುನ ಬಾಳಿಕಾಯಿ, ಸತೀಶ ಶೇಜವಾಡಕರ್, ಮಣಿಕಂಠ ಶ್ಯಾಗೋಟಿ, ನಾರಾಯಣ ಜರತಾರಘರ್, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ಶಿವು ಮೆಣಸಿನಕಾಯಿ, ಮಹಿಳಾ ಅಧ್ಯಕ್ಷ ಚೈತ್ರ ಶಿರೂರು, ಸೀಮಾ ಲಡ್ವಾ, ಜಿಲ್ಲಾ ಗ್ರಾಮಾಂತರ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.