ADVERTISEMENT

ಮಹದಾಯಿಗೆ ₹500 ಕೋಟಿ ಮೀಸಲಿಡಲು ಸಚಿವ ಪ್ರಲ್ಹಾದ ಜೋಶಿ ಕೋರಿಕೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2020, 12:14 IST
Last Updated 28 ಫೆಬ್ರುವರಿ 2020, 12:14 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ₹400ರಿಂದ ₹500 ಕೋಟಿ ಮೀಸಲಿಡಬೇಕು. ತಜ್ಞರ ವಿಶೇಷ ತಂಡ ರಚಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವಷ್ಟು ಕಾಲ ಎಲ್ಲವೂ ಸಾಧ್ಯ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸುಪ್ರೀಂ ಕೋರ್ಟ್‌ ಸೂಚನೆ ನೀಡಿ ಒಂದು ವಾರದಲ್ಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುತ್ತೇವೆ ಎಂದು ನಾಲ್ಕೈದು ತಿಂಗಳ ಹಿಂದೆ ನಾನು ಹೇಳಿದ್ದೆ’ ಎಂದರು.

‘ಮಹದಾಯಿ ವಿವಾದ ಪರಿಹರಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಜೊತೆಗೆ ನ್ಯಾಯಾಲಯದ ಹೊರಗೂ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲು ನಮ್ಮ ಪ್ರಯತ್ನ ಮುಂದುವರಿಯುತ್ತದೆ’ ಎಂದರು.

ADVERTISEMENT

‘ಬಹಳ ವರ್ಷಗಳಿಂದ ದೇಶದಲ್ಲಿ ಅಂತರ ರಾಜ್ಯ ನದಿ ಜೋಡಣೆ ವಿಚಾರಗಳು ನನೆಗುದಿಗೆ ಬಿದ್ದಿದ್ದವು. ಇನ್ನು ಮುಂದೆ ಒಂದೊಂದಾಗಿ ಪರಿಹಾರವಾಗುತ್ತವೆ. ಮಹದಾಯಿಗಾಗಿ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಯಾವುದೇ ತೊಡಕುಗಳು ಇಲ್ಲ. ಕುಡಿಯುವ ನೀರಿನ ಯೋಜನೆಯಾದ ಕಾರಣ ಸಮಸ್ಯೆಯಾಗುವುದಿಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಹೇಳಿದಂತೆ ನಡೆದುಕೊಂಡಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.