ಹುಬ್ಬಳ್ಳಿ: ‘ಖಾಸಗಿ ಶಾಲೆ ಶಿಕ್ಷಕರಿಗೆ ಕಡಿಮೆ ವೇತನ ನೀಡಿ ಹೆಚ್ಚು ದುಡಿಸಿಕೊಳ್ಳಲಾಗುತ್ತಿದೆ. ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಕನಿಷ್ಠ ಮೂಲವೇತನ ಹಾಗೂ ಸೇವಾ ಭದ್ರತೆ ಜಾರಿಗೊಳಿಸಬೇಕು’ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದಿಂದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.
‘ರಾಜ್ಯ ಸರ್ಕಾರವು 2006ರಲ್ಲೇ ಆದೇಶ ನೀಡಿದ್ದರೂ ಈವರೆಗೆ ಸಮರ್ಪಕವಾಗಿ ಜಾರಿ ಆಗಿಲ್ಲ. ನ್ಯಾಯಾಲಯವು ಪ್ರಕರಣದಲ್ಲಿ ಯಾವುದೇ ತಡೆಯಾಜ್ಞೆಯನ್ನೂ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಆರ್.ರಂಜನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಘದ ಮಹಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ, ಖಜಾಂಚಿ ರವೀಂದ್ರ ಪಾಟೀಲ, ಸುಕನ್ಯಾ ಕುಲಕರ್ಣಿ ಮನವಿ ಸಲ್ಲಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯವರು ಈಚೆಗೆ ಜಿಲ್ಲಾಧಿಕಾರಿ ಭೇಟಿಯಾಗಿ, ‘ಈ ವಿಚಾರವು ನ್ಯಾಯಾಲಯದಲ್ಲಿದೆ. ಆದ್ದರಿಂದ ಆದೇಶ ಅನುಷ್ಠಾನಕ್ಕೆ ಒತ್ತಾಯಿಸಬಾರದು’ ಎಂದು ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.