
ಧಾರವಾಡ: ‘ಸಾರ್ವಜನಿಕರು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು ಮತ್ತು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ವತಿಯಿಂದ ನಗರದ ಡಿಮಾನ್ಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಿಜೋಫ್ರೆನಿಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಸಿಜೋಫ್ರೆನಿಯಾ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ವಿಳಂಬ ಮಾಡಬಾರದು. ರೋಗಿಗಳಿಗೆ ಮನೋವೈದ್ಯರಿಂದ ಚಿಕಿತ್ಸೆ ಕೊಡಿಸಬೇಕು ಎಂದರು.
ಬೆಳಗಾವಿ ಮತ್ತು ಕಲಬುರಗಿಯ ಮಾನಸಿಕ ಆರೋಗ್ಯ ವಿಮರ್ಶಾ ಮಂಡಳಿ ಅಧ್ಯಕ್ಷ ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶ ಡಿ.ಆರ್.ರೇಣಕೆ ಮಾತನಾಡಿ, ಸಿಜೋಫ್ರೆನಿಯಾ ಕಾಯಿಲೆಯು ಮಧ್ಯ ವಯಸ್ಕರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದಕ್ಕೆ ಹಲವಾರು ಕಾರಣಗಳು ಇವೆ. ಆಸೆ, ಒತ್ತಡ, ಉದ್ವೇಗ ಮೊದಲಾದವು ಕಾಯಿಲೆಗೆ ಕಾರಣಗಳು ಎಂದರು.
ಡಿಮಾನ್ಸ್ ನಿರ್ದೇಶಕ ಡಾ.ಅರುಣಕುಮಾರ ಸಿ., ಎಸ್.ವಿ.ವೈ.ಎಂ ನಿರ್ವಹಣಾ ಸಮಿತಿ ಸದಸ್ಯ ಎಸ್.ಎನ್.ಹೆಗಡೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಚಿತ್ತರಗಿ, ಡಾ.ಪರಶುರಾಮ ಎಫ್.ಕೆ., ಡಾ.ಮಂಜುನಾಥ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ರವೀಂದ್ರ ಬೊವೇರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ತನುಜಾ ಕೆ.ಎನ್., ಜಿಲ್ಲಾ ವಕೀಲರ ಸಂಘ ಅಧ್ಯಕ್ಷ ಅಶೋಕ ಏಣಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.