ADVERTISEMENT

ಧಾರವಾಡ: ನರೇಗಾ ಬಾಕಿ ಹಣ ಪಾವತಿಗೆ ಆಗ್ರಹ

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 16:07 IST
Last Updated 3 ಆಗಸ್ಟ್ 2024, 16:07 IST
ನರೇಗಾ ಬಾಕಿ ಹಣ ಪಾವತಿಗೆ ಆಗ್ರಹಿಸಿ ಎಐಕೆಕೆಎಂಎಸ್ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರು ಧಾರವಾಡ ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು
ನರೇಗಾ ಬಾಕಿ ಹಣ ಪಾವತಿಗೆ ಆಗ್ರಹಿಸಿ ಎಐಕೆಕೆಎಂಎಸ್ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರು ಧಾರವಾಡ ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು   

ಧಾರವಾಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ(ನರೇಗಾ) ಕೆಲಸ ಮಾಡಿದ ಕೂಲಿಕಾರರಿಗೆ ನೀಡಬೇಕಾದ ಬಾಕಿ ಹಣವನ್ನು ಪಾವತಿಸಬೇಕು ಹಾಗೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಜಿಲ್ಲಾ ಸಮಿತಿಯವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ನರೇಗಾ ಕೂಲಿ ಕಾರ್ಮಿಕರು ಹಾಗೂ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಎಐಕೆಕೆಎಂಎಸ್ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ದೀಪಾ ಧಾರವಾಡ ಮಾತನಾಡಿ, ರೈತರ ಕೃಷಿ ಬಿಕ್ಕಟ್ಟು ನಿವಾರಣೆಗೆ ಸರ್ಕಾರಗಳು ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಉತ್ಪಾದನಾ ವೆಚ್ಚಕ್ಕೆ ಶೇ 50ರಷ್ಟು ಲಾಭಾಂಶ ಸೇರಿಸಿ ಕನಿಷ್ಠ ಬೆಂಬಲ ಬೆಲೆ ಖಾತರಿಯಾಗಿ ದೊರೆಯುವಂತೆ ಮಾಡುವ ಕಾಯ್ದೆಯನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಾಲ ಬಾಧೆಯಿಂದ ಜಿಲ್ಲೆಯಲ್ಲಿ 15 ತಿಂಗಳಲ್ಲಿ 100ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಎಲ್ಲ ರೈತರ ಹಾಗೂ ಕೃಷಿ ಕೂಲಿಕಾರರ ಸಾಲಮನ್ನಾ ಮಾಡಬೇಕು. ರೈತರಿಗೆ ಬಡ್ಡಿ ರಹಿತ ಸಾಲವನ್ನು ಸರ್ಕಾರವೇ ನೀಡಬೇಕು. ರೈತರ ಆತ್ಮಹತ್ಯೆ ತಡೆಗಟ್ಟಲು ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ರೈತರ ಪಂಪ್‌ಸೆಟ್‍ಗಳಿಗೆ ಮೀಟರ್ ಅಳವಡಿಕೆ ಕೈ ಬಿಡಬೇಕು. ಬೀಜ ರಸಗೊಬ್ಬರ ಹಾಗೂ ಕೀಟನಾಶಕಗಳ ಬೆಲೆ ನಿಯಂತ್ರಿಸಬೇಕು. ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಬಿಡುಗಡೆ ಮಾಡಬೇಕು. ಬೆಳೆ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂದರು.

ಸಂಘಟನೆಯ ಕಾರ್ಯದರ್ಶಿ ಶರಣು ಗೋನವಾರ, ಮಾರುತಿ ಪೂಜಾರ, ಗಿರೀಶ ಪೂಜಾರ, ಗಂಗಾಧರ ಜಾಧವ, ಮಡಿವಾಳೆಪ್ಪ ಬೊಸ್ಲೆ, ಬಸಪ್ಪ ಕರಕಟ್ಟಿ, ಕಲ್ಮೇಶ ಹುಡೇದ, ಸಿದ್ದವ್ವ ಅಗಸನಹಳ್ಳಿ, ಮಲ್ಲನಗೌಡ ಗೌಡರ, ಮಂಜುಳಾ ಜಗದಾಳಿ ಪಾಲ್ಗೊಂಡಿದ್ದರು.

ಎಐಕೆಕೆಎಂಎಸ್ ಸಂಘಟನೆ ಜಿಲ್ಲಾ ಸಮಿತಿಯವರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.