ADVERTISEMENT

ಗ್ರಾಮಗಳಿಗೆ ಬಸ್‌ ಸೌಲಭ್ಯ ಒದಗಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 15:43 IST
Last Updated 16 ಸೆಪ್ಟೆಂಬರ್ 2021, 15:43 IST
ಹುಬ್ಬಳ್ಳಿಯಲ್ಲಿ ಗುರುವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು
ಹುಬ್ಬಳ್ಳಿಯಲ್ಲಿ ಗುರುವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು   

ಹುಬ್ಬಳ್ಳಿ: ಕೋವಿಡ್‌ ಪ್ರಕರಣಗಳು ಕಡಿಮೆಯಾಗಿ ರಾಜ್ಯದಲ್ಲಿ ಹಂತಹಂತವಾಗಿ ಶಾಲಾ, ಕಾಲೇಜುಗಳು ಆರಂಭವಾಗುತ್ತಿವೆ. ಆದ್ದರಿಂದ ಸರ್ಕಾರ ಎಲ್ಲಾ ಗ್ರಾಮಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್‌ ಸೌಕರ್ಯ ಆರಂಭಿಸಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಆಗ್ರಹಿಸಿದೆ.

ಗುರುವಾರ ನಗರದಲ್ಲಿ ಪ್ರತಿಭಟನೆ ಮಾಡಿದ ಪರಿಷತ್‌ ಕಾರ್ಯಕರ್ತರು ಬದಲಾದ ಶಾಲಾ ಸಮಯಕ್ಕೆ ತಕ್ಕಂತೆ ಹಳ್ಳಿಗಳಿಗೆ ಬಸ್‌ ಸೌಕರ್ಯ ಕಲ್ಪಿಸಬೇಕು, ಡಿಪ್ಲೊಮಾ, ಎಂಜಿನಿಯರಿಂಗ್‌, ಸ್ನಾತಕ ಹಾಗೂ ಸ್ನಾತಕೋತ್ತರ ತರಗತಿಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಅನೇಕ ಬಡ ಪ್ರತಿಭಾವಂತ ಮಕ್ಕಳು ವಸತಿ ನಿಲಯಗಳ ಮೇಲೆ ಅವಲಂಬಿತರಾಗಿದ್ದಾರೆ. ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಗಳ ವ್ಯಾಪ್ತಿಗೆ ಬರುವ ವಸತಿನಿಲಯಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳನ್ನು ಆರಂಭಿಸಬೇಕು. ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗುವುದಿಲ್ಲ. ಆದ್ದರಿಂದ ಬೇಡಿಕೆಗೆ ಅನುಗುಣವಾಗಿ ಸೌಲಭ್ಯ ಕಲ್ಪಿಸಬೇಕು ಎಂದರು.

ADVERTISEMENT

‘ಎಬಿವಿಪಿ ನಿದ್ದೆ ಮಾಡುತ್ತಿದೆಯೇ’

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಸಕ್ರಿಯವಾಗಿರುತ್ತಿದ್ದ ಎಬಿಬಿಪಿ ಈಗ ಅನೇಕ ಸಮಸ್ಯೆಗಳಿದ್ದರೂ ಕಣ್ಣು ಮುಚ್ಚಿಕೊಂಡಿದೆ ಎಂದು ಕಾಂಗ್ರೆಸ್‌ ವಕ್ತಾರ ವೇದವ್ಯಾಸ ಕೌಲಗಿ ಟೀಕಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಕಾಂಗ್ರೆಸ್ ಸರ್ಕಾರವಿದ್ದಾಗ ಹುಬ್ಬಳ್ಳಿಯಲ್ಲಿ ಎಬಿವಿಪಿ ಕಾರ್ಯಕರ್ತರು ಜನಸಾಮಾನ್ಯರ ಸಮಸ್ಯೆಗಳಿಗೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತಿದ್ದರು. ಈಗ ಇಂಧನ ಬೆಲೆ ಏರಿಕೆ ವಿರುದ್ಧ ಚಕಾರ ಎತ್ತಲಿಲ್ಲ. ಮೈಸೂರಿನಲ್ಲಿ ಇತ್ತೀಚೆಗೆ ಯುವತಿ ಮೇಲೆ ನಡೆದ ಅತ್ಯಾಚಾರದ ಬಗ್ಗೆ ಪ್ರತಿಭಟನೆ ಮಾಡಿಲ್ಲ. ರಾಜ್ಯದಲ್ಲಿ ದೇವಾಲಯಗಳನ್ನು ಕೆಡವಿದರೂ ವಿರೋಧಿಸಿಲ್ಲ. ಬಿಜೆಪಿ ಸರ್ಕಾರ ಇರುವಲ್ಲಿ ಎಬಿವಿಪಿ ಮೌನವಾಗಿರುವುದು ಏಕೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.