ADVERTISEMENT

ಹುಬ್ಬಳ್ಳಿ | ಆಶ್ರಯ ಮನೆ ಹಸ್ತಾಂತರ, ರಾಹುಲ್‌ ಭಾಗಿ: ಜಮೀರ್‌ ಅಹ್ಮದ್‌ಖಾನ್‌

ಹುಬ್ಬಳ್ಳಿಯಲ್ಲಿ ಬೃಹತ್‌ ಕಾರ್ಯಕ್ರಮ, ಕಾಂಗ್ರೆಸ್‌ ವರಿಷ್ಠರು ಭಾಗಿ: ಸಚಿವ ಜಮೀರ್‌ ಅಹ್ಮದ್‌ಖಾನ್‌

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2025, 6:30 IST
Last Updated 3 ನವೆಂಬರ್ 2025, 6:30 IST
ಹುಬ್ಬಳ್ಳಿಯ ಮಂಟೂರು ರಸ್ತೆ ಬಳಿ ನಿರ್ಮಿಸಿರುವ ಆಶ್ರಯ ಮನೆಗಳನ್ನು ಸಚಿವ ಜಮೀರ್‌ ಅಹ್ಮದ್‌ಖಾನ್‌ ಭಾನುವಾರ ಪರಿಶೀಲಿಸಿದರು. ಶಾಸಕ ಪ್ರಸಾದ ಅಬ್ಬಯ್ಯ ಜೊತೆಗಿದ್ದರು
ಹುಬ್ಬಳ್ಳಿಯ ಮಂಟೂರು ರಸ್ತೆ ಬಳಿ ನಿರ್ಮಿಸಿರುವ ಆಶ್ರಯ ಮನೆಗಳನ್ನು ಸಚಿವ ಜಮೀರ್‌ ಅಹ್ಮದ್‌ಖಾನ್‌ ಭಾನುವಾರ ಪರಿಶೀಲಿಸಿದರು. ಶಾಸಕ ಪ್ರಸಾದ ಅಬ್ಬಯ್ಯ ಜೊತೆಗಿದ್ದರು   

ಹುಬ್ಬಳ್ಳಿ: ‘ರಾಜ್ಯದ ವಿವಿಧ ಭಾಗಗಳಲ್ಲಿ ನಿರ್ಮಿಸಿರುವ ಆಶ್ರಯ ಮನೆಗಳ ಹಸ್ತಾಂತರ ಕಾರ್ಯಕ್ರಮ ನ. 29ರಂದು ನಗರದಲ್ಲಿ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ’ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ಖಾನ್‌ ಹೇಳಿದರು.

ನಗರದ ಮಂಟೂರ ರಸ್ತೆಯ ಹೊಸಯಲ್ಲಾಪುರ ಗ್ರಾಮದಲ್ಲಿ ರಾಜ್ಯ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನಿರ್ಮಿಸಿರುವ ಮನೆಗಳನ್ನು ಭಾನುವಾರ ಪರಿಶೀಲಿಸಿ, ಮಾಧ್ಯಮದವರೊಂದಿಗೆ ಮಾತನಾಡಿದರು.

‘2.30 ಲಕ್ಷ ಆಶ್ರಯ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಹಂತ ಹಂತವಾಗಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 42 ಸಾವಿರ ಮನೆಗಳನ್ನು ಹಸ್ತಾಂತರಿಸುತ್ತೇವೆ. ಬೃಹತ್‌ ಕಾರ್ಯಕ್ರಮ ಆಯೋಜಿಸಿದ್ದು, ಪಕ್ಷದ ವರಿಷ್ಠರಿಗೆ ಮುಖ್ಯಮಂತ್ರಿ ಮುಖಾಂತರ ಆಹ್ವಾನ ನೀಡಿದ್ದೇವೆ’ ಎಂದರು.

ADVERTISEMENT

‘ಒಂದು ಮನೆ ನಿರ್ಮಾಣಕ್ಕೆ ₹7.50 ಲಕ್ಷ ವೆಚ್ಚವಾಗುತ್ತಿದ್ದು, ಕೇಂದ್ರ ಸರ್ಕಾರ ₹3 ಲಕ್ಷ ನೀಡುತ್ತದೆ. 11 ವರ್ಷದ ಅವಧಿಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗಳಿಗೆ ನೀಡಬೇಕದ್ದ ₹9,000 ಕೋಟಿಯಲ್ಲಿ, ಕೇವಲ ₹310 ಕೋಟಿ ನೀಡಿದೆ. ಆದರೆ ಇದೆಲ್ಲವನ್ನೂ ಮೀರಿ ಬಡವರ ಅಭ್ಯುದಯಕ್ಕಾಗಿ ರಾಜ್ಯ ಸರ್ಕಾರ ಕಳೆದ ವರ್ಷ 30,700 ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಿದೆ’ ಎಂದು ಹೇಳಿದರು.

‘ಡಿಸೆಂಬರ್‌ನಲ್ಲಿ 80 ಸಾವಿರ ಹಾಗೂ ಮುಂಬರುವ ಏಪ್ರಿಲ್‌– ಮೇ ತಿಂಗಳಲ್ಲಿ 30 ಸಾವಿರ ಮನೆಗಳನ್ನು ಹಸ್ತಾಂತರಿಸಲಾಗುವುದು. ವಿವಿಧ ಜಿಲ್ಲೆಗಳಲ್ಲಿ ಮನೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಗುಣಮಟ್ಟಕ್ಕೆ ಆದ್ಯತೆ ನಿಡಲಾಗಿದೆ’ ಎಂದರು.

‘ಈಗಾಗಲೇ ಮೊದಲ ಹಂತದಲ್ಲಿ ಮನೆಗಳನ್ನು ಹಂಚಿಕೆ ಮಾಡಿದ್ದು, ಇದೀಗ ಎರಡನೇ ಹಂತದಲ್ಲಿ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಮೂರನೇ ಹಂತದಲ್ಲಿ 35 ಸಾವಿರಕ್ಕೂ ಅಧಿಕ ಮನೆಗಳನ್ನು ಹಸ್ತಾಂತರ ಮಾಡಲಾಗುವುದು. ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ರಾಜ್ಯ ಸರ್ಕಾರ ₹6,000 ಕೋಟಿ ಬಿಡುಗಡೆ ಮಾಡಿದ್ದು, ಒಂದೊಂದು ಮನೆಗೆ ₹4 ಲಕ್ಷಕ್ಕಿಂತ ಹೆಚ್ಚು ವೆಚ್ಚ ಮಾಡಲಾಗುತ್ತಿದೆ’ ಎಂದು ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಹೆಸ್ಕಾಂ ಅಧ್ಯಕ್ಷ ಸೈಯದ್ ಅಜಂಪೀರ್‌ ಖಾದ್ರಿ, ಶಾಸಕ ಎನ್.ಎಚ್. ಕೋನರಡ್ಡಿ, ಪ್ರೊ. ಐ.ಜಿ. ಸನದಿ, ಪೊಲೀಸ್‌ ಕಮಿಷನರ್‌ ಎನ್. ಶಶಿಕುಮಾರ್, ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಅಶೋಕ ಡಿ.ಆರ್., ಮುಖ್ಯ ಎಂಜಿನಿಯರ್ ಎಚ್.ಪಿ. ಸುಧೀರ ಇದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಬಿಜೆಪಿ ಬಿಹಾರ ಚುನಾವಣೆಯಲ್ಲಿ ಅದನ್ನೇ ತನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ

-ಜಮೀರ್‌ ಅಹ್ಮದ್‌ಖಾನ್‌ ಸಚಿವ

ಸಚಿವ ಸ್ಥಾನ ಬಿಡುವೆ: ಜಮೀರ್‌

ಹುಬ್ಬಳ್ಳಿ: ‘ಪಕ್ಷದ ಹೈಕಮಾಂಡ್‌ ಸೂಚಿಸಿದರೆ ಸಚಿವ ಸ್ಥಾನ ಬಿಟ್ಟುಕೊಟ್ಟು ಪಕ್ಷ ವಹಿಸುವ ಜವಾಬ್ದಾರಿ ನಿಭಾಯಿಸಲು ಸಿದ್ಧನಿದ್ದೇನೆ’ ಎಂದು ವಸತಿ ವಕ್ಫ್‌ ಮತ್ತು ಅಲ್ಪಸಂಖ್ಯಾತ ಖಾತೆ ಸಚಿವ ಜಮೀರ್ ಅಹ್ಮದ್‌ಖಾನ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ದಲಿತ ಸಮುದಾಯದವರು ಮುಖ್ಯಮಂತ್ರಿ ಆಗಬೇಕೆನ್ನುವ ಕೂಗು ಎದ್ದಿದ್ದು ನನ್ನ ಬೆಂಬಲವೂ ಇದೆ. ಆದರೆ ಅದು ಹೈಕಮಾಂಡ್‌ ತೀರ್ಮಾನವಾಗಿದ್ದು ನಾನು ಅಭಿಪ್ರಾಯವಷ್ಟೇ ತಿಳಿಸಬಹುದು’ ಎಂದರು. ‘ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಖುರ್ಚಿ ಖಾಲಿಯಿಲ್ಲ 2028ರವರೆಗೂ ಸಿದ್ದರಾಮಯ್ಯ ಅವರೇ ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಅವರು ಟಗರು ಇದ್ದಂತೆ ಠಕ್ಕರ್‌ ನೀಡಲು ಯಾರಿಂದಲೂ ಸಾಧ್ಯವಿಲ್ಲ. ಡಿ.ಕೆ. ಶಿವಕುಮಾರ್‌ ಅವರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದು ಸಹಜವಾಗಿ ಅವರಲ್ಲಿ ಮುಖ್ಯಮಂತ್ರಿ ಆಗಬೇಕೆನ್ನುವ ಆಸೆ ಇದೆ. ಸಿದ್ದರಾಮಯ್ಯ ಅವರ ಅವಧಿ ಮುಗಿದ ನಂತರ ಅವರು ಮುಖ್ಯಮಂತ್ರಿ ಆಗಬಹುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.