ADVERTISEMENT

ಸಿ.ಎಂ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 9:00 IST
Last Updated 31 ಜುಲೈ 2021, 9:00 IST

ಹುಬ್ಬಳ್ಳಿ: ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಿರುವುದರಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ಸಿ.ಎಂ. ಕಚೇರಿಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂದು ಅಮ್‌ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕಿ ಶಾ‌ಂತಲಾ ದಾಮ್ಲೆ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ವರ್ಷದಲ್ಲಿ ಆರು ತಿಂಗಳು ಬೆಳಗಾವಿಯಿಂದಲೇ ಸರ್ಕಾರದ ಕಾರ್ಯಚಟುವಟಿಕೆಗಳನ್ನು ನಡೆಸಬೇಕು, ಮಹದಾಯಿ ಯೋಜನೆಯನ್ನು ಹತ್ತು ದಿನಗಳ ಒಳಗೆ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ವ್ಯಾಸಂಗ ಮಾಡಿದವರಿಗೆ ಸ್ಥಳೀಯವಾಗಿಯೇ ಉದ್ಯೋಗದ ಅವಕಾಶ ಕಲ್ಪಿಸಿಕೊಡಬೇಕು’ ಎಂದರು.

‘ಸ್ಥಳೀಯವಾಗಿ ಅವಕಾಶ ಸಿಗದ ಕಾರಣ ವಿದ್ಯಾವಂತ ಯುವಜನತೆ ವಯಸ್ಸಾದ ಪೋಷಕರನ್ನು ತೊರೆದು ದೂರದ ಊರುಗಳಿಗೆ ಹೋಗಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್‌ ಹಾಗೂ ಲಾಕ್‌ಡೌನ್‌ ಕಾರಣದಿಂದಾಗಿ ಸಾಕಷ್ಟು ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕೊಟ್ಟಿವೆ. ಆದ್ದರಿಂದ ಇನ್ಫೋಸಿಸ್‌ ಸಂಸ್ಥೆ ಕೂಡ ಹುಬ್ಬಳ್ಳಿಯಲ್ಲಿ ಕಾರ್ಯ ಚಟುವಟಿಕೆ ಆರಂಭಿಸಿ ಮನೆಯಿಂದಲೇ ಕೆಲಸ ಮಾಡಲು ವ್ಯವಸ್ಥೆ ಮಾಡಿಕೊಡಬೇಕು‘ ಎಂದು ಒತ್ತಾಯಿಸಿದರು. ಮಹದಾಯಿ ನೀರು ಹರಿಸಲು ಇರುವ ಅಡೆತಡೆಗಳನ್ನು ನಿವಾರಿಸಬೇಕು, ಇದಕ್ಕಾಗಿ ಕಾರ್ಯಪಡೆ ರಚಿಸಬೇಕು ಎಂದೂ ಆಗ್ರಹಿಸಿದರು.

ADVERTISEMENT

ಉತ್ತರ ಕರ್ನಾಟಕದ ಅಭಿವೃದ್ದಿ ರಾಜ್ಯ ವೀಕ್ಷಕ ರೊಮಿ ಭಾಟಿ, ‘ಮೂರು ವರ್ಷಗಳ ಅವಧಿಯಲ್ಲಿ ಕರ್ನಾಟಕ ಮೂವರು ಮುಖ್ಯಮಂತ್ರಿಗಳನ್ನು ಕಂಡಿದೆ. ಈಗ ಉತ್ತರ ಕರ್ನಾಟಕದವರೇ ಸಿ.ಎಂ. ಆಗಿದ್ದು, ಈ ಭಾಗ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿಯಾಗಬೇಕು. ಇದಕ್ಕೆ ಅವರು ಇಚ್ಛಾಶಕ್ತಿ ತೋರಿಸಬೇಕು’ ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ ನರಗುಂದ, ಜಂಟಿ ಕಾರ್ಯದರ್ಶಿ ಶ್ಯಾಮ ನರಗುಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.