ಹುಬ್ಬಳ್ಳಿ: 'ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಬದಲಾಗಿ ಯುವಕರಿಗೆ ನೀಡಬೇಕಿದೆ. ಅ ಕಾರಣಕ್ಕಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಅವರು 75 ವರ್ಷ ಆದವರು ರಾಜಕೀಯ ನಿವೃತ್ತಿ ಪಡೆಯಬೇಕು ಎಂದಿದ್ದಾರೆ' ಎಂದು ಸರ್ಕಾರದ ಮುಖ್ಯ ಸಚೇತಕ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
'75 ವರ್ಷ ಆದವರು ರಾಜಕೀಯ ನಿವೃತ್ತಿ ಪಡೆಯಬೇಕು' ಎನ್ನುವ ಮೋಹನ್ ಭಾಗವತ್ ಅವರ ಹೇಳಿಕೆಗೆ ನಗರದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ಭಾಗವತ್ ಅವರು ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿಯೇ ಹೇಳಿದ್ದಾರೆ. ಅವರ ಈ ಹೇಳಿಕೆ ಅತ್ಯಂತ ಮಹತ್ವದ್ದಾಗಿದೆ' ಎಂದರು.
'ಇದು ಬಿಜೆಪಿಯ ಆಂತರಿಕ ವಿಚಾರವಾಗಿದ್ದರೂ, ಪ್ರಸ್ತುತವಾಗಿದೆ. ಬಿ.ಎಸ್. ಯಡಿಯೂರಪ್ಪ ಅವರಿಗೆ 75 ವರ್ಷ ಆಗಿದೆ ಎಂದು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆಮಾಡಿದರು. ಬಿಜೆಪಿಯವರು ಈಗ ಆತ್ಮಾವಲೋಕನ ಮಾಡಿಕೊಳ್ಳಬೇಕು' ಎಂದು ಅಭಿಪ್ರಾಯಪಟ್ಟರು.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮೈಕಲ್ ಕುನ್ಹಾ ವರದಿಗರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಸಲೀಂ ಅಹ್ಮದ್, 'ಬಿಜೆಪಿ ನಾಯಕರು ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನೇ ಮಾಡುತ್ತಾರೆ. ಮೈಕಲ್ ಕುನ್ಹಾ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿಯಲ್ಲ. ಅವರು ನಿವೃತ್ತ ನ್ಯಾಯಮೂರ್ತಿಯಾಗಿದ್ದು, ಘಟನೆಗೆ ಸಂಬಂಧಿಸಿ ಸಂಪೂರ್ಣ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ತಪ್ಪು ಹುಡುಕುವ ಬದಲು, ಸಲಹೆ ಸೂಚನೆಗಳನ್ನು ನೀಡಲಿ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.