ಹುಬ್ಬಳ್ಳಿ: ‘ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳ ಹೇಳಿದರು.
ನಗರದ ತಾಲ್ಲೂಕು ಆಡಳಿತಸೌಧದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
‘ಗ್ರಾಮೀಣ ಪ್ರದೇಶದಲ್ಲಿ ಜಲಜೀವನ್ ಮಿಷನ್ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ. ಕಲುಷಿತ ನೀರನ್ನು ಜನರಿಗೆ ಪೂರೈಸಲಾಗುತ್ತಿದೆ ಎಂಬ ದೂರುಗಳಿವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು‘ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗೆ ಸೂಚಿಸಿದರು.
‘ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಿಸಿಯೂಟದ ವೇಳೆ ವಿತರಿಸುತ್ತಿರುವ ಬಾಳೆ ಹಣ್ಣು ಗುಣಮಟ್ಟವಾಗಿಲ್ಲ. ಹಣ್ಣು ಪರಿಶೀಲಿಸಿ, ವಿತರಿಸಬೇಕು‘ ಎಂದು ತಾಲ್ಲೂಕು ಪಂಚಾಯಿತಿ ಇಒ ರಾಮಚಂದ್ರ ಹೊಸಮನಿ, ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
‘ಸರ್ಕಾರಿ ಶಾಲೆಗಳಲ್ಲಿ ಕೆಲ ಮಕ್ಕಳು ಹಾಲು ಕುಡಿಯಲು ಇಷ್ಟಪಡುತ್ತಿಲ್ಲ ಎಂಬ ಮಾಹಿತಿ ಇದೆ. ಹಾಲು ಕುಡಿಯುವಂತೆ ಮಕ್ಕಳ ಮನವೊಲಿಸಬೇಕು. ಸಮವಸ್ತ್ರ, ಪಠ್ಯ ಪುಸ್ತಕ, ಶೂ, ಸಾಕ್ಸ್ ವಿತರಣೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಬಿಇಒಗಳು ಗಮನಹರಿಸಬೇಕು’ ಎಂದರು.
’ಶಾಲಾ ಮಕ್ಕಳಿಗೆ ಈಗಾಗಲೇ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಗಿದೆ. ಶೂ ಮತ್ತು ಸಾಕ್ಸ್ ಶೀಘ್ರದಲ್ಲಿಯೇ ವಿತರಿಸಲಾಗುವುದು. ಶಿಕ್ಷಕರ ಕೊರತೆ ಇದ್ದು, ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಮಕ್ಕಳ ಬೊಧನೆಗೆ ತೊಂದರೆಯಾಗಂತೆ ಕ್ರಮವಹಿಸಲಾಗಿದೆ’ ಎಂದು ಹುಬ್ಬಳ್ಳಿ ಗ್ರಾಮೀಣ ಬಿಇಒ ಉಮೇಶ ಬೊಮ್ಮಕ್ಕನವರ ಮಾಹಿತಿ ನೀಡಿದರು.
‘ಕುಸುಗಲ್ ಗ್ರಾಮದ ಶಾಲೆಗೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕಿದೆ. ಮಂಟೂರಿನಲ್ಲಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆ ಕರೆತರಬೇಕು‘ ಎಂದು ತಾ.ಪಂ ಇಒ ಸೂಚಿಸಿದರು.
‘ಕೋಳಿವಾಡ ಗ್ರಾಮದಲ್ಲಿನ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಆರ್‌ಒ ಫಿಲ್ಟರ್ ಅಳವಡಿಸಲಾಗುತ್ತಿದೆ. ಸ್ನಾನ ಗೃಹ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಎರಡು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನದ ಕೊರತೆಯಿದೆ. ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಸಲ್ಲಿಸಿರುವ ಅರ್ಜಿಗಳು ತ್ವರಿತ ವಿಲೇವಾರಿ ಮಾಡಲಾಗುತ್ತಿದೆ‘ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ನಾಗರತ್ನಾ ಕ್ಯಾಸನೂರ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಂಗಮೇಶ ಬಂಗಾರಿಮಠ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರತೀಕ್ಷಾ, ವಲಯ ಅರಣ್ಯ ಅಧಿಕಾರಿ ಆರ್.ಎಸ್.ಉಪ್ಪಾರ, ಶಿವಾನಂದ ಮಾದರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
‘ಕೃಷಿ ಹೊಂಡ ನಿರ್ಮಾಣಕ್ಕೆ ಆದ್ಯತೆ ನೀಡಿ’
‘ಕೃಷಿಹೊಂಡ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಹೊಂಡದ ಸುತ್ತ ತಂತಿ ಬೇಲಿ ಅಳವಡಿಸಬೇಕು. ಹೆಸರು ಕಾಳು ಖರೀದಿ ಕೇಂದ್ರ ತೆರೆಯಲು ಪ್ರಸ್ತಾವ ಸಲ್ಲಿಸಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ತೆಂಬದ ಅವರಿಗೆ ತಾ.ಪಂ. ಇಒ ರಾಮಚಂದ್ರ ಹೊಸಮನಿ ಸೂಚಿಸಿದರು. ‘ರೈತರ ಬೇಡಿಕೆಗೆ ತಕ್ಕಂತೆ ಯೂರಿಯಾ ಗೊಬ್ಬರವನ್ನು ವಿತರಿಸಲಾಗಿದೆ. ನಮ್ಮಲ್ಲಿ 175 ಮೆಟ್ರಿಕ್ ಟನ್ ಹೆಚ್ಚುವರಿ ಯೂರಿಯಾ ದಾಸ್ತಾನು ಇದೆ. ರೈತರು ಹೆಚ್ಚು ಯೂರಿಯಾ ಬಳಸದೇ ನ್ಯಾನೊ ಯೂರಿಯಾ ಬಳಸುವಂತೆ ಸಲಹೆ ನೀಡಲಾಗಿದೆ’ ಎಂದು ಎಂದು ಮಂಜುಳಾ ತೆಂಬದ ಮಾಹಿತಿ ನೀಡಿದರು.
ತಿರುಮಲಕೊಪ್ಪದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ ವ್ಯವಸ್ಥಿತವಾಗಿಲ್ಲ. ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕುರಾಮಚಂದ್ರ ಹೊಸಮನಿ, ಇಒ, ತಾಲ್ಲೂಕು ಪಂಚಾಯಿತಿ
ಉತ್ತಮ ಮಳೆಯಾಗಿದ್ದು ಹೊಲದಲ್ಲಿನ ಹೆಚ್ಚುವರಿ ನೀರನ್ನು ರೈತರು ಹೊರಗೆ ಹಾಕುವ ಮೂಲಕ ಬೆಳೆ ರಕ್ಷಣೆಗೆ ಆದ್ಯತೆ ನೀಡಬೇಕು. ನ್ಯಾನೋ ಯೂರಿಯಾ ಬಳಸಬೇಕು.ಮಂಜುಳಾ ತೆಂಬದ, ಸಹಾಯಕ ನಿರ್ದೇಶಕಿ, ತಾಲ್ಲೂಕು ಕೃಷಿ ಇಲಾಖೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.