
ಹುಬ್ಬಳ್ಳಿ: ಹಿರಿಯ ನಾಗರಿಕರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹುಬ್ಬಳ್ಳಿ-ಬೆಂಗಳೂರು ಕರ್ನಾಟಕ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳವಾರ ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸಲಾಯಿತು.
ಬಾಗಲಕೋಟೆಯ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಮಧ್ಯಾಹ್ನ ಮುಖ್ಯಮಂತ್ರಿ ಅವರ ಪರವಾಗಿ ಪೌರಾಡಳಿತ ಸಚಿವ ರಹೀಂ ಖಾನ್ ಸ್ಥಳಕ್ಕೆ ಆಗಮಿಸಿ, ಸಂಘದ ಮನವಿ ಪತ್ರ ಸ್ವೀಕರಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ನಿರ್ದೇಶಕ ಅಶೋಕ, ಜಂಟಿ ನಿರ್ದೇಶಕ ನಟರಾಜ ಅವರೂ ಮನವಿ ಪತ್ರ ಸ್ವೀಕರಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸಂಘದ ಪದಾಧಿಕಾರಿಗಳನ್ನು ಸುವರ್ಣಸೌಧದ ತಮ್ಮ ಕೊಠಡಿಗೆ ಕರೆಯಿಸಿಕೊಂಡು ಬೇಡಿಕೆಗಳ ಕುರಿತು ಚರ್ಚಿಸಿ ಜನವರಿಯಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳ ಸಭೆ ನಡೆಸಿ, ತೀರ್ಮಾನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಿ.ಎ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಘದ ಉಪಾಧ್ಯಕ್ಷ ಲಿಂಗರಾಜ ಅಂಗಡಿ, ಆರ್.ಕೆ.ಮಠದ, ಕಾರ್ಯದರ್ಶಿ ಪಿ.ಪಿ.ಗಾಯಕವಾಡ, ಎಂ.ಪಿ.ಕುಂಬಾರ, ಡಿ.ಟಿ.ಪಾಟೀಲ, ಎಸ್.ಕೆ.ಆದಪ್ಪನವರ, ಎಸ್.ಎಂ.ಕೊಳೂರ, ಹೇಮಗಿರಿ ಪಟ್ಟಣಶೆಟ್ಟಿ, ಬಿ.ಐ.ಚಕ್ರಸಾಲಿ, ಎಸ್.ಕೆ.ಪತ್ತಾರ, ಪಿ.ಬಿ.ಹಿರೇಮಠ, ಬಿ.ಪಿ. ಹಳ್ಳೂರ, ಆರ್.ಎಂ.ಚಿಕ್ಕವೀರಮಠ ಮತ್ತು ಸುನಂದಾ ಬೆನ್ನೂರ, ರೇಣುಕಾ ನವಲಗುಂದ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಧರಣಿಯಲ್ಲಿ ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಉತ್ತರ ಕನ್ನಡ ಹಾಗೂ ಬೆಂಗಳೂರು ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.