ಹುಬ್ಬಳ್ಳಿ: 'ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ತಂತ್ರ ಹೆಣೆದಿದ್ದು, ಅದಕ್ಕಾಗಿಯೇ ಅವರನ್ನು ಎಐಸಿಸಿಯ ಅಹಿಂದ್ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಲಾಗುದೆ' ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸಿದ್ದರಾಮಯ್ಯ ಅವರನ್ನು ರಾಷ್ಟ್ರರಾಜಕಾರಣಕ್ಕೆ ಕರೆಸಿಕೊಂಡು, ಸಿಎಂ ಖುರ್ಚಿಯಿಂದ ಕೆಳಗಿಳಿಸುವ ಯೋಜನೆ ಇದಾಗಿದೆ. ಪ್ರಮೋಷನ್ ಮಾಡಿ, ಡಿಮೋಷನ್ ಮಾಡುವ ತಂತ್ರಗಾರಿಕೆ ಇದು' ಎಂದರು.
'ಮೂಲಭೂತ ಸೌಲಭ್ಯಗಳು ಬೇಕಾದರೆ ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿ ಹೇಳಿರುವುದು ಸರಿಯಾಗಿಯೇ ಇದೆ. ರಾಜ್ಯದಲ್ಲಿ ಯಾವ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎನ್ನುವುದು ಎಲ್ಲರಿಗೂ ತಿಳಿದ ಸತ್ಯ. ನಾನು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುವುದಿಲ್ಲ. ಆದರೆ, ಸರ್ಕಾರ ನಡೆಸುತ್ತಿರುವವರೇ ಲೂಟಿ ಹೊಡೆಯುತ್ತಿದ್ದಾರೆ ಅದು ನಿಲ್ಲಬೇಕು. ಲೂಟಿ ಹೊಡೆಯುವುದು ನಿಂತರೆ ರಾಜ್ಯ ಅಭಿವೃದ್ಧಿಯಾಗುತ್ತದೆ' ಎಂದು ಹೇಳಿದರು.
'ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಮೀಸಲಾತಿಗಾಗಿ ನಡೆದ ಹೋರಾಟ ಸಂದರ್ಭದಲ್ಲಿ ಪಂಚಮಸಾಲಿ ಸಮುದಾಯದವರ ಮೇಲೆ ಲಾಠಿ ಪ್ರಹಾರ ನಡೆದಿತ್ತು. ಹೈಕೋರ್ಟ್ ನ್ಯಾಯಾಧೀಶರು ಪ್ತಕರಣದ ಕುರಿತು ವರದಿ ನೀಡುವಂತೆ ಸರ್ಕಾರಕ್ಕೆ ಮೂರು ತಿಂಗಳು ಗಡುವು ನೀಡಿದ್ದರು. ಇನ್ನೂ ವರದಿ ಸಲ್ಲಿಸಿಲ್ಲ. ಜುಲೈ 4 ಕ್ಕೆ ಗಡುವು ಮುಕ್ತಾಯವಾಗಿದ್ದು, ಸರ್ಕಾರ ನ್ಯಾಯಾಂಗ ನಿಂದನೆಗೆ ಒಳಗಾಗಿದೆ. ಸಂಬಂಧಿಸಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಕೋರ್ಟ್ ಮೆಟ್ಟಿಲು ಹತ್ತುತ್ತೇವೆ' ಎಂದು ಶಾಸಕ ಬೆಲ್ಲದ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.