
ಹುಬ್ಬಳ್ಳಿ: ‘ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಸೂಚಿಸಿದರು.
ನಗರದ ದೇಶಪಾಂಡೆ ಫೌಂಡೇಷನ್ ಸಭಾಭವನದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ, ಹೆಚ್ಚುವರಿ ಆಯುಕ್ತರ ಕಾರ್ಯಾಲಯದ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
‘ಸರ್ಕಾರಿ ಶಾಲೆಯ ಮಕ್ಕಳು ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹಿನ್ನೆಲೆಯವರಾಗಿರುತ್ತಾರೆ. ಅವರ ಶೈಕ್ಷಣಿಕ ಅಭಿವೃದ್ಧಿಗೆ ಮುಂದಿನ ಮೂರು ತಿಂಗಳು ನಿರಂತರವಾಗಿ ಶ್ರಮಿಸಬೇಕು’ ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಜಿಲ್ಲೆಯಲ್ಲಿ ಕೈಕೊಂಡಿರುವ ಕಾರ್ಯಕ್ರಮ, ಮಿಷನ್ ವಿದ್ಯಾಕಾಶಿ ಪರಿಕಲ್ಪನೆ, ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳ ಕ್ರಮಗಳ ಕುರಿತು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭುವನೇಶ್ ಪಾಟೀಲ್ ಮಾತನಾಡಿ, ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಶಾಲಾ–ಕಾಲೇಜುಗಳಿಗೆ ಭೌತಿಕ ಸೌಲಭ್ಯ ಕಲ್ಪಿಸುತ್ತಿರುವ ಬಗ್ಗೆ ಮಾಹಿತಿ ನೀಡಿದರು.
ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರೀಕ್ಷೆಗೆ ಸಂಬಂಧಿಸಿದ ನೀಲ ನಕ್ಷೆ, ಮಾದರಿ ಪ್ರಶ್ನೆ ಪತ್ರಿಕೆ, ಮಕ್ಕಳಿಗೆ ನೀಡಬೇಕಾದ ಸಲಹೆ–ಸೂಚನೆಗಳ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಮೂರು ಜಿಲ್ಲೆಗಳ 385 ಜನ ಶಿಕ್ಷಕರು, 40 ಮಂದಿ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು.
ಹೆಚ್ಚುವರಿ ಆಯುಕ್ತರ ಕಚೇರಿ ನಿರ್ದೇಶಕ ಈಶ್ವರ ನಾಯಕ್, ನಿರ್ದೇಶಕಿ ಜಯಶ್ರೀ, ಉಪ ನಿರ್ದೇಶಕ ಗಿರೀಶ ಪದುಕಿ, ಸುಜಾತ ತಿಮ್ಮಾಪುರ, ತ್ರಿವೇಣಿ ಅಶೋಕ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕಳದಿಮಠ, ಡಿವೈಪಿಸಿ ಎಸ್.ಎಂ. ಹುಡೇದಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಿ.ಕೆ. ಚಿಕ್ಕಮಠ, ಉಮೇಶ ಬೊಮ್ಮಕನವರ, ಹನುಮಂತಪ್ಪ ಫಡ್ನೇಶಿ, ಡಯೆಟ್ ಪ್ರಾಚಾರ್ಯ ಬಿ.ಎಸ್. ನಲವತವಾಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.