ADVERTISEMENT

ಪಕ್ಷೇತರ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್‌ ಅಭ್ಯರ್ಥಿ ಕಣ್ಣೀರು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 11:18 IST
Last Updated 23 ಅಕ್ಟೋಬರ್ 2020, 11:18 IST
ಶಿವಶಂಕರ ಕಲ್ಲೂರ
ಶಿವಶಂಕರ ಕಲ್ಲೂರ   

ಹುಬ್ಬಳ್ಳಿ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶಿವಶಂಕರ ಕಲ್ಲೂರ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕಣ್ಣೀರು ಹಾಕಿದರು.

‘ಚುನಾವಣೆಯಲ್ಲಿ ಸೋಲು, ಗೆಲುವು ಬೇರೆ ವಿಚಾರ. ಕಣದಿಂದ ಹಿಂದೆ ಸರಿಯುವ ಪ್ರಸಂಗ ಬರಬಹುದು ಎಂದು ನಿರೀಕ್ಷೆಯೇ ಮಾಡಿರಲಿಲ್ಲ. ಪ್ರಚಾರಕ್ಕಾಗಿ ಒಂದು ವರ್ಷದಿಂದ ಕೆಲಸ ಮಾಡಿದ್ದೆ. ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವೆ’ ಎಂದು ಕಲ್ಲೂರ ಹೇಳಿದರು.

ಇದಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ‘ಶಿವಶಂಕರ ಕಲ್ಲೂರ ಅವರು ಕೌಟುಂಬಿಕ ಕಾರಣದಿಂದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಕೌಟುಂಬಿಕ ಕಾರಣದಿಂದ ಗುರಿಕಾರ ಇತ್ತೀಚೆಗೆ ಚುನಾವಣಾ ಪ್ರಚಾರದಲ್ಲಿ ತೊಡಗಿರಲಿಲ್ಲ. ಈ ಕುರಿತು ಪಕ್ಷದ ವರಿಷ್ಠರು ಕ್ಷೇತ್ರದ ನಾಲ್ಕು ಜಿಲ್ಲೆಗಳ ಮುಖಂಡರನ್ನು ಸಂಪರ್ಕಿಸಿ ಮಾಹಿತಿ ಪಡೆದು ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ಕಲ್ಲೂರ ಒಪ್ಪಿಗೆ ಸೂಚಿಸಿದ್ದಾರೆ’ ಎಂದರು.

‘ರಾಜಕಾರಣದಲ್ಲಿ ಯಾವುದೂ ನಿರೀಕ್ಷಿತವಲ್ಲ. ಕೆಲವೊಮ್ಮೆ ಇಂತಹ ಬೆಳವಣಿಗೆಗಳು ನಡೆಯುತ್ತಿವೆ. ಇದರಿಂದ ಪಕ್ಷಕ್ಕೆ ಹಿನ್ನಡೆ ಆಗುವುದಿಲ್ಲ. ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಅಭ್ಯರ್ಥಿಗೆ ಬೆಂಬಲ ನೀಡಲಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.