ADVERTISEMENT

ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 24 ಮೇ 2023, 8:19 IST
Last Updated 24 ಮೇ 2023, 8:19 IST
   

ಹುಬ್ಬಳ್ಳಿ: ನಗರದ ಹು–ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ, ಕಾಂಗ್ರೆಸ್ ಕಾರ್ಯಕರ್ತರು, ಅಬ್ಬಯ್ಯ ಅಭಿಮಾನಿಗಳು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸ್ಟೇಷನ್ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಲ್ಯಾಮಿಂಗ್ಟನ್ ರಸ್ತೆ, ಸರ್ ಸಿದ್ದಪ್ಪ ಕಂಬಳಿ ರಸ್ತೆ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಂತ್ಯಗೊಂಡಿತು.

ಅಬ್ಬಯ್ಯ ಅವರ ಭಾವಚಿತ್ರವನ್ನು ಪ್ರದರ್ಶಿಸಿದ ಅಭಿಮಾನಿಗಳು, ‘ಬೇಕೇ ಬೇಕು, ಅಬ್ಬಯ್ಯಗೆ ಸಚಿವ ಸ್ಥಾನ ಬೇಕು’ ಎಂದು ಘೋಷಣೆಗಳನ್ನು ಕೂಗಿದರು.

ADVERTISEMENT

ಸತತ ಮೂರು ಸಲ ಕ್ಷೇತ್ರದಲ್ಲಿ ಜಯ ಸಾಧಿಸಿರುವ ಅಬ್ಬಯ್ಯ ಅವರು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮಾದರಿ ಕ್ಷೇತ್ರವನ್ನಾಗಿಸಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಟ್ಟರೆ, ಇಡೀ ಜಿಲ್ಲೆ ಮತ್ತಷ್ಟು ಅಭಿವೃದ್ಧಿಯಾಗಲಿದೆ. ಕಾಂಗ್ರೆಸ್ ಹೈಕಮಾಂಡ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.

ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ದೊರೈರಾಜ್ ಮಣಿಕುಂಟ್ಲ, ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ, ಮುಖಂಡರಾದ ಪ್ರಕಾಶ ಬುರಬುರೆ, ದಲಿತ ಮುಖಂಡ ಗುರುನಾಥ ಉಳ್ಳಿಕಾಶಿ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.