ಧಾರವಾಡ: ಸತತ ಪರಿಶ್ರಮದಿಂದ ಯಶಸ್ಸು ಸಾಧಿಸಬಹುದು. ಕ್ರೀಡಾಪಟುಗಳು ಚೆನ್ನಾಗಿ ಅಭ್ಯಾಸ ಮಾಡಿ ಸಾಧನೆ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಡಿಡಿಪಿಐ ಎಸ್.ಎಸ್.ಕೆಳದಿಮಠ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಆರ್.ಎನ್.ಶೆಟ್ಟಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ (14 ಮತ್ತು 17 ವರ್ಷ ವಯೋಮಿತಿ ಬಾಲಕ ಮತ್ತು ಬಾಲಕಿಯರ ವಿಭಾಗ) ರಾಜ್ಯಮಟ್ಟದ ಟೆಕ್ವಾಂಡೋ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಆಟೋಟ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ರಾಷ್ಟ್ರಮಟ್ಟದಲ್ಲಿ ಸಾಧನೆ ಮೆರೆದು ಕೀರ್ತಿ ತರಬೇಕು ಎಂದು ಹೇಳಿದರು.
ಜಿಲ್ಲಾ ಟೆಕ್ವಾಂಡೊ ಸಂಸ್ಥೆ ಅಧ್ಯಕ್ಷ ಬಸವರಾಜು ತಾಳಿಕೋಟಿ ಮಾತನಾಡಿ, ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದರು.
ಕ್ರೀಡೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಪಡೆದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಕೋಟಾದಲ್ಲಿ ಉದ್ಯೋಗ ಪಡೆಯಲು ಅವಕಾಶ ಇದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡೆಗಳಲ್ಲಿಯೂ ಪಾಲ್ಗೊಳ್ಳಬೇಕು ಎಂದರು.
ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಅಂಕಗಳಿಕೆಗೆ ಸೀಮಿತವಾಗಬಾರದು ಪ್ರತಿಭೆ ಮುಖ್ಯ. ಪ್ರತಿಭೆ ಇದ್ದರೆ ಅವಕಾಶಗಳನ್ನು ಬಳಸಿಕೊಂಡು ಯಶಸ್ಸು ಸಾಧಿಸಬಹುದು ಎಂದರು.
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ವಿಷ್ಣುನಾರಾಯಣ ಹೆಬ್ಬಾರ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಈಶ್ವರ ಆಯಟ್ಟಿ, ಟೆಕ್ವಾಂಡೊ ಕೋಚ್ ಪರಪ್ಪ ಪಾಲ್ಗೊಂಡಿದ್ದರು.
500ಕ್ಕೂ ಹೆಚ್ಚು ಸ್ಪರ್ಧಿಗಳು
ಬೆಳಗಾವಿ ಧಾರವಾಡ ಕಲಬುರಗಿ ಮಂಡ್ಯ ಹಾಸನ ಬೆಂಗಳೂರು ಸಹಿತ 25 ಜಿಲ್ಲೆಗಳ ಸುಮಾರು 500ಕ್ಕೂ ಹೆಚ್ಚು ಸ್ಪರ್ಧಿಗಳು ಟೂರ್ನಿಗೆ ಬಂದಿದ್ದಾರೆ. 14 ವರ್ಷದೊಳಗಿನ ಬಾಲಕಿಯರು (16 ಕೆ.ಜಿ ಯಿಂದ 38+ ಕೆ.ಜಿ) ಬಾಲಕರು (18 ಕೆ.ಜಿಯಿಂದ 41+ ಕೆ.ಜಿ) ಹಾಗೂ 17 ವರ್ಷದೊಳಗಿನ ಬಾಲಕಿಯರು (32 ಕೆ.ಜಿ.ಯಿಂದ 68+ ಕೆ.ಜಿ) ಬಾಲಕರ (35 ಕೆ.ಜಿ.ಯಿಂದ 78+ ಕೆ.ಜಿ) ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಶನಿವಾರ ಸ್ಪರ್ಧೆಗಳು ನಡೆಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.