ADVERTISEMENT

ರಾಜ್ಯಕ್ಕೆ ಸಿಇಒಗಳ ತಂಡ ಭೇಟಿ ಶೀಘ್ರ

ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 14:34 IST
Last Updated 25 ಜನವರಿ 2020, 14:34 IST

ಹುಬ್ಬಳ್ಳಿ: ‘ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ, ವಿವಿಧ ಕಂಪನಿಗಳ ಕಾರ್ಯನಿರ್ವಾಹಕ ಅಧಿಕಾರಿಗಳ (ಸಿಇಒ) ತಂಡ ರಾಜ್ಯಕ್ಕೆ ಸದ್ಯದಲ್ಲೇ ಭೇಟಿ ನೀಡಿ, ಸರ್ಕಾರದೊಂದಿಗೆ ಚರ್ಚೆ ನಡೆಸಲಿದೆ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದ ಪ್ರಿಯದರ್ಶಿನಿ ಕಾಲೊನಿಯಲ್ಲಿ ಶನಿವಾರ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ನಾನು, ಉದ್ಯಮಿಗಳೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದೇವೆ. ಈ ವೇಳೆ ಎಲ್ಲರೂ ರಾಜ್ಯದಲ್ಲಿ ಹೂಡಿಕೆ ಮಾಡಲು ಒಲವು ತೋರಿದ್ದಾರೆ’ ಎಂದರು.

‘ಉತ್ತರ ಕರ್ನಾಟಕದಲ್ಲಿ ಹೂಡಿಕೆ ಮಾಡುವವರಿಗೆ ವಿಶೇಷ ಸೌಲಭ್ಯ ನೀಡುವ ಬಗ್ಗೆಯೂ ಉದ್ಯಮಿಗಳ ಗಮನಕ್ಕೆ ತಂದಿದ್ದೇವೆ. ಈ ವೇಳೆ ಭೂಮಿ ಮಂಜೂರಾತಿಗೆ ಸಂಬಂಧಿಸಿದ, ಪ್ರಕ್ರಿಯೆಗಳನ್ನು ಮತ್ತಷ್ಟು ಸರಳಗೊಳಿಸುವಂತೆ ಉದ್ಯಮಿಗಳು ಮನವಿ ಮಾಡಿದ್ದಾರೆ. ಅವರ ಮನವಿಗೆ ಸ್ಪಂದಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ADVERTISEMENT

‘ಲಕ್ಷ್ಮಿ ಮಿತ್ತಲ್, ಅರವಿಂದ ಕಿರ್ಲೋಸ್ಕರ್‌, ಡಾಸೋ, ಸಿಸ್ಟಮ್‌, ಲಾಕ್ಹೀಡ್‌ ಮಾರ್ಟೀನ್‌, ಲೂಲು ಗ್ರೂಪ್‌, ದಾಲ್ಮಿಯಾ, ನೋವಾ ನಾಸ್ಡಿಕ್‌, ವೋಲ್ವೊ ಸೇರಿದಂತೆ 40ಕ್ಕೂ ಹೆಚ್ಚು ಉದ್ಯಮಿಗಳನ್ನು ಭೇಟಿ ಮಾಡಲಾಗಿದೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.

ಬಳಿಕ ಪಾವಸ್ಕರ್ ಲೇಔಟ್, ಕೊಠಾರಿ ಲೇಔಟ್‌, ಸಹದೇವನಗರ ಹಾಗೂ ಎ.ಆರ್‌.ಟಿ ಕಾಲೊನಿಗಳಲ್ಲಿ ವಿವಿಧ ಕಾಮಗಾರಿಗಳನ್ನು ಜಗದೀಶ ಶೆಟ್ಟರ್ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.